ಎಬಿವಿಪಿ ನೇತೃತ್ವದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಪ್ರತಿಭಟನೆ
ಮೈಸೂರು: 2021 2022ರ ಶೈಕ್ಷಣಿಕ ಸಾಲಿನ ಬಾಕಿಯಿರುವ ವಿದ್ಯಾರ್ಥಿ ವೇತನವನ್ನು ಈ ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನೇತೃತ್ವದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಮಾವಣೆಗೊಂಡ ವಿದ್ಯಾರ್ಥಿಗಳು, ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಲಕ್ಷಾಂತರ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಪ್ರತಿ ವರ್ಷ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ತಮ್ಮ ಶಿಕ್ಷಣಕ್ಕೆ ವಿದ್ಯಾರ್ಥಿವೇತನವನ್ನು ಪೂರಕವಾಗಿ ಬಳಸಿಕೊಳ್ಳುತ್ತಿದ್ದರು.
ಆದರೆ, ಈ ಬಾರಿ ವಿದ್ಯಾರ್ಥಿವೇತನಕ್ಕೆ ಯು ಯು ಸಿ ಎಂ ಎಸ್ ತಂತ್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಕೆಲವರಿಗೆ ವಿದ್ಯಾರ್ಥಿ ವೇತನ ಬಿಡುಗಡೆ ಆಗಿರುವುದಾಗಿ ನಮೂದಿಸಲಾಗಿದೆ. ಆದರೆ, ಬಹುತೇಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ದೊರೆತಿರುವುದಿಲ್ಲ ಎಂದು ಅವರು ಆರೋಪಿಸಿದರು.
ಈ ಕೂಡಲೇ ಸರ್ಕಾರವು ಇತ್ತ ಗಮನ ಹರಿಸಿ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸಬೇಕು. ಹಾಗೂ ವಿದ್ಯಾರ್ಥಿ ವೇತನ ನೀಡುವಲ್ಲಿ ಅವ್ಯವಹಾರ ನಡೆದಿದ್ದು, ಈ ಬಗ್ಗೆಯು ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಎನ್‌ಇಪಿ ಜಾರಿಯಾದ ನಂತರ ಎಲ್ಲ ವಿಶ್ವವಿದ್ಯಾನಿಲಯಗಳು ಯು ಯು ಸಿ ಎಂ ಎಸ್ ತಂತ್ರಾಂಶವನ್ನು ಬಳಸುತ್ತಿದ್ದು, ದಾಖಲಾತಿಯಿಂದ ಫಲಿತಾಂಶದವರೆಗೆ ಎಲ್ಲ ರೀತಿಯ ಮಾಹಿತಿಗಳನ್ನೂ ಅಲ್ಲಿ ನಮೂದಿಸಬೇಕಾಗಿದೆ. ಆದರೆ, ಈ ತಂತ್ರಾಂಶದಲ್ಲಿರುವ ಕೆಲವು ಸಮಸ್ಯೆಗಳಿಂದ ಹಾಸ್ಟೆಲ್‌ಗೆ ಅರ್ಜಿ ಸಲ್ಲಿಸಲು, ಬೇರೆ ಕಾಲೇಜಿಗೆ ವರ್ಗಾವಣೆ ಪಡೆಯಲು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ತೊಂದರೆ ಉಂಟಾಗಿದೆ. ವಿವಿಗಳು ಸರಿಯಾದ ಫಲಿತಾಂಶ ನೀಡದೇ ಇರುವುದರಿಂದ ಹಲವಾರು ರೀತಿಯ ಸಮಸ್ಯೆಗಳನ್ನು ವಿದ್ಯಾರ್ಥಿ ಸಮೂಹ ಎದುರಿಸುತ್ತಿದ್ದು, ಈ ಕೂಡಲೇ ತಂತ್ರಾಂಶವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.
ನಂತರ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಮನವಿ ಸಲ್ಲಿಸಲಾಯಿತು. ಎಬಿವಿಪಿ ಜಿಲ್ಲಾ ಸಂಚಾಲಕ ಎಂ.ಶಿವು, ಕಾರ್ಯದರ್ಶಿ ದಿನೇಶ್, ಮುಖಂಡರಾದ ನಮಿತಾ, ನಮ್ರತಾ, ಶ್ರೇಯಸ್ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.