ಹನೂರು: ಪಾದಯಾತ್ರೆ ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಲು ಗುರುವಾರ ಕ್ಷೇತ್ರಕ್ಕೆ ಆಗಮಿಸುತ್ತಿರುವ ಜಾ.ದಳ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಸ್ವಾಗತಿಸಲು ಜಿಲ್ಲೆಯ ಜಾ.ದಳ ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಹನೂರು ವಿಧಾನಸಭಾ ಕ್ಷೇತ್ರದ ಜಾ.ದಳ ಅಭ್ಯರ್ಥಿ ಎಂ.ಆರ್. ಮಂಜುನಾಥ್ ತಿಳಿಸಿದ್ದಾರೆ.
ಪಟ್ಟಣದ ಜಾ.ದಳ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿರವರ ಪುತ್ರ ನಿಖಿಲ್ ಕುಮಾರಸ್ವಾಮಿರವರು ಕಳೆದ ವರ್ಷದಂತೆ ಈ ಬಾರಿಯೂ ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಗುರುವಾರ ಮಧ್ಯಾಹ್ನ 12 ಗಂಟೆಗೆ ನಮ್ಮ ಜಿಲ್ಲೆಯ ಗಡಿ ಭಾಗ ಸತ್ಯಗಾಲ ಹ್ಯಾಂಡ್ ಪೋಸ್ಟ್ ಗೆ ಆಗಮಿಸುವ ನಿಖಿಲ್, ಅಲ್ಲಿಂದ ಕಾರ್ಯಕರ್ತರೊಂದಿಗೆ ಬೈಕ್ ರ್ಯಾಲಿ ಮೂಲಕ ಕೊಳ್ಳೇಗಾಲಕ್ಕೆ ಆಗಮಿಸಿ, ಪಟ್ಟಣದಲ್ಲಿರುವ ಡಾ. ಅಂಬೇಡ್ಕರ್ ಪುತ್ಥಳಿಗೆ ಪುಷ್ಪ ಮಾಲಿಕೆ ಅರ್ಪಿಸಿ, ನಂತರ ಮುಖಂಡ ಮಾಲೆ ಮಹದೇವ ಜೊತೆಗೂಡಿ ಕೊಳ್ಳೇಗಾಲ ಪಟ್ಟಣದಲ್ಲಿ ಜಾ.ದಳ ಕಚೇರಿ ಉದ್ಘಾಟನೆ ಮಾಡಲಿದ್ದಾರೆ. ನಂತರ ಹನೂರು ಪಟ್ಟಣ ತಲುಪಲಿದ್ದಾರೆ. ಪಟ್ಟಣದಲ್ಲಿ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ನಂತರ ತಾಳುಬೆಟ್ಟಕ್ಕೆ ತೆರಳಲಿದ್ದಾರೆ. ತಾಳುಬೆಟ್ಟದಿಂದ ಪಾದಯಾತ್ರೆ ಮೂಲಕ ಮಹದೇಶ್ವರ ಬೆಟ್ಟ ತಲುಪಿ ಮಾದಪ್ಪನ ದರ್ಶನ ಪಡೆದು ನಾಳೆ ವಾಪಸ್ ಬೆಂಗಳೂರಿಗೆ ತೆರಳಲಿದ್ದಾರೆ.