ಶ್ರೀರಂಗಪಟ್ಟಣ : ರೈತರ ಜೀವನಾಡಿ ಕೃಷ್ಣರಾಜ ಸಾಗರದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರು ಶ್ರೀರಂಗಪಟ್ಟಣದಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸಿ, ಪ್ರತಿಭಟಿಸಿದರು.
ಭೂಮಿತಾಯಿ ಹೋರಾಟ ಸಮಿತಿ ಸಹಯೋಗದಲ್ಲಿ ರೈತರು ಪಟ್ಟಣದ ಸ್ನಾನಘಟ್ಟದ ಬಳಿಯ ಕಾವೇರಿ ನದಿಗಿಳಿದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಅರೆ ಬೆತ್ತಲೆ ಮೆರವಣಿಗೆ ಹೊರಟ ಪ್ರತಿಭಟನಾಕಾರರು ತಾಲ್ಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ಮನ್ನಣೆ ನೀಡಿ ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಟ್ಟಿರುವ ಸರ್ಕಾರ ಕೆ ಆರ್ ಎಸ್ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹರಿಸುತ್ತಿದೆ.ಕೂಡಲೆ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಜಲಾಶಯದಲ್ಲಿ ಇರುವ ನೀರು ಬರಿದು ಮಾಡುವ ಸರ್ಕಾರ ರೈತರ ಹಿತ ಕಾಪಾಡುವಲ್ಲಿ ವಿಫಲವಾಗಿದೆ. ರೈತರ ಬೆಳೆಗೆ ನೀರಿಲ್ಲ ಎಂದು ರೈತರು ಪರಿತಪಿಸುತ್ತಿದ್ದರೂ ಬೆಳೆ ರಕ್ಷಣೆಗೆ ನೀರು ನೀಡದೆ ನೆರೆ ರಾಜ್ಯಕ್ಕೆ ಹರಿಸಿ ಜಲಾಶಯದಲ್ಲಿ ನೀರನ್ನು ನೂರು ಅಡಿಗೆ ತಂದು ನಿಲ್ಲಿಸಿದೆ. ಇದೇ ರೀತಿ ನೀರು ಹರಿಸುತ್ತಿದ್ದರೆ ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯಲು ನೀರು ಸಹ ಸಿಗದಂತೆ ಮಾಡಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಭೂಮಿತಾಯಿ ಹೋರಾಟ ಸಮಿತಿ ಅಧ್ಯಕ್ಷ ಕೃಷ್ಣೇಗೌಡ, ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್. ನಂಜುಂಡೇಗೌಡ, ಹನಿಯಂಬಾಡಿ ನಾಗರಾಜು ಇತರರು ಧರಣಿಯಲ್ಲಿ ಭಾಗವಹಿಸಿದ್ದರು.