Mysore
22
scattered clouds

Social Media

ಗುರುವಾರ, 26 ಡಿಸೆಂಬರ್ 2024
Light
Dark

ಹಿರಿಯ ನಟಿ ಲೀಲಾವತಿ ನಿಧನಕ್ಕೆ ಗಣ್ಯರ ಸಂತಾಪ

ಮೈಸೂರು : ಕನ್ನಡ ಚಿತ್ರ ರಂಗದ ಹಿರಿಯ ನಟಿ ಇಂದು (ಡಿಸೆಂಬರ್‌ ೮) ಇಹಲೋಕ ತ್ಯೆಜಿಸಿದ್ದಾರೆ. ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಲೀಲಾವತಿ ಇಂದು ಅಸುನೀಗಿದ್ದಾರೆ.

ಕನ್ನಡ ಮತ್ತು ಇತರೆ ಭಾಷೆಗಳು ಸೇರಿ ಸುಮಾರು ೬೦೦ ಕ್ಕೂ ಹೆಚ್ಚು ಚಿತ್ರಗಳಲ್ಲಿ ಲೀಲಾವತಿ ನಟಿಸಿದ್ದರು.

ಕನ್ನಡದ ಈ ನಟಿಯ ಅಗಲಿಕೆಯ ಬಗ್ಗೆ ಹಲವು ರಾಜಕೀಯ ನಾಯಕರು ಸಂತಾಪಗಳನ್ನು ಸೂಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕೆಲವು ದಿನಗಳ ಹಿಂದೆ ನಟಿ ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿ ಬಂದಿದ್ದರು. ಕನ್ನಡದ ನಟರಾದ ದರ್ಶನ್‌, ಶಿವಣ್ಣ ಸೇರಿದಂತೆ ಹಲವು ಕಲಾವಿದರು ನಟಿಯನ್ನು ಭೇಟಿಯಾಗಿದ್ದರು.

ಗಣ್ಯರ ಸಂತಾಪಗಳು

ಹಲವು ದಶಕಗಳ ಕಾಲ ತಮ್‌ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮೊಂದಿಗೆ ಇರುತ್ತಾರೆಂಬ ನಂಬಿಕೆ ಹುಸಿಯಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ದೇವರು ನೀಡಲು ಎಂದು ಪ್ರಾರ್ಥಿಸುತ್ತೇನೆ.
-ಸಿಎಂ ಸಿದ್ದರಾಮಯ್ಯ.

ಆರಂಭದ ದಿನಗಳಲ್ಲಿ ಬಹಳ ಕಷ್ಟಪಟ್ಟು ಸಿನಿಮಾ ರಂಗದಲ್ಲಿ ಅವರು ಮೇಲೆದಿದ್ದವರು ಲೀಲಾವತಿ ಅವರು. ಅದನ್ನು ನನ್ನೊಂದಿಗೆ ಹಂಚಿಕೊಳ್ಳುತ್ತಿದ್ದರು. ಅವರು ನನ್ನ ಮತ್ತೊಂದು ಅಮ್ಮ. ಪ್ರತಿ ಬಾರಿಯೂ ಒಂದೇ ರೀತಿಯ ಪ್ರೀತಿ ವಿಶ್ವಾಸದಿಂದ ನನ್ನ ಮಾತನಾಡಿಸುತ್ತಿದ್ದರು. ಲೀಲಾವತಿ ಅವರು ನನ್ನ ಮತ್ತೊಂದು ಅಮ್ಮ. ಅವರನ್ನು ಕಳೆದುಕೊಂಡಿರುವ ಬೇಸರ ತಂದಿದೆ.
-ನಟಿ ಶೃತಿ.

ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ ಲೀಲಾವತಿ ಅವರು ವಿಧಿವಶರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ದಕ್ಷಿಣ ಭಾರತದ ಸುಮಾರು 600ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿ, ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿದ ಅವರ ಅಗಲಿಕೆಯಿಂದ ಕಲಾ ಪ್ರಪಂಚ ತನ್ನ ಮಾತೃಸದೃಶ ಕಲಾವಿದೆಯನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಅವರ ಕುಟುಂಬ ಹಾಗೂ ಅಭಿಮಾನಿ ವರ್ಗದವರಲ್ಲಿ ಸಂತಾಪಗಳನ್ನು ಸಲ್ಲಿಸುತ್ತೇನೆ.
-ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ.

ಕನ್ನಡ ಚಿತ್ರರಂಗದ ಕಲಾ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಲೀಲಾವತಿ ನಿಧನರಾಗಿರುವ ಸುದ್ದಿ ಕೇಳಿ ಮುನಸ್ಸಿಗೆ ದುಖವಾಯಿತು. ಅವರ ಅಗಲಿಕೆಯಿಂದ ಕನ್ನಡ ನಾಡು ಹಾಗೂ ಕಲಾರಂಗ ಒಬ್ಬ ಮನೆಯ ಹಿರಿಯರನ್ನು ಕಳೆದುಕೊಂಡು ಬಡವಾದಂತಾಗಿದೆ. ಕನ್ನಡ ಚಿತ್ರರಂಗದ ಮೇರು ನಟರಾದ ಡಾ. ರಾಜಕುಮಾರ್ ಸೇರಿದಂತೆ ಎಲ್ಲ ದಿಗ್ಗಜ ನಟರೊಂದಿಗೆ ವಿಭಿನ್ನ ಪಾತ್ರಗಳನ್ನು ಮಾಡಿ ಎಲ್ಲರ ಮನೆ ಮಾತಾಗಿದ್ದರು. ಅವರ ಪುತ್ರ ವಿನೋದ್ ರಾಜ್ ಅವರಿಗೆ ತಾಯಿಯ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ‌ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ
-ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

ಭಕ್ತ ಕುಂಬಾರ, ವೀರ ಕೇಸರಿ, ಭಾಗ್ಯದೇವತೆ, ಸೋತು ಗೆದ್ದವಳು, ನಂದಾದೀಪ, ವಿಧಿ ವಿಲಾಸ, ಸಂತ ತುಕಾರಾಂ, ರಣಧೀರ ಕಂಠೀರವ ಸೇರಿ ಅವರು ನಟಿಸಿದ್ದ ಅನೇಕ ಚಿತ್ರಗಳು ಕನ್ನಡಿಗರ ಮನೆ ಮನಗಳನ್ನು ತುಂಬಿರುತ್ತವೆ. ಲೀಲಾವತಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಪುತ್ರ ವಿನೋದ್ ರಾಜ್ ಅವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ.
-ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ.

ಕನ್ನಡ ಚಿತ್ರರಂಗಕ್ಕೆ 50 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ್ದ ಲೀಲಾವತಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಸದಾಕಾಲ ರೈತರ ಬಗ್ಗೆ ಕಾಳಜಿ ಹೊಂದಿದ್ದರು. ತಮ್ಮದೇ ಹಣದಲ್ಲಿ ಪಶುಚಿಕಿತ್ಸಾ ಆಸ್ಪತ್ರೆಯನ್ನು ನಿರ್ಮಿಸಿದ್ದಾರೆ. ಭಗವಂತ ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ, ಕುಟುಂಬಸ್ಥರಿಗೆ ನೋವು ಸಹಿಸುವ ಶಕ್ತಿಯನ್ನು ದಯಪಾಲಿಸಲಿ.
-ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ