ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆ ಆಗುವ ಮೊದಲೇ ಕಾಂಗ್ರೆಸ್ ಪಕ್ಷದ ಮುಖಂಡರು ತಮ್ಮ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.
ನಗರದಲ್ಲಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಮತ ನೀಡದೆ ಇದ್ದರೆ ಗ್ಯಾರಂಟಿಗಳು ರದ್ದು ಕುರಿತ ಮಾಗಡಿಯ ಕಾಂಗ್ರೆಸ್ ಶಾಸಕರ ಹೇಳಿಕೆಯನ್ನು ಗಮನಿಸಿದ್ದೇನೆ ಎಂದರು.
ಕಾಂಗ್ರೆಸ್ ಮುಖಂಡರು ರಾಜ್ಯದಲ್ಲಿ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳಲ್ಲಿ ಗೆಲ್ಲುವ ಭ್ರಮೆಯಲ್ಲಿದ್ದರು. ವಾಸ್ತವ ಸ್ಥಿತಿ ಅವರಿಗೆ ಈಗ ಅರ್ಥ ಆಗಿದೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಒಗ್ಗೂಡಿ 28ರಲ್ಲಿ 28 ಕ್ಷೇತ್ರಗಳನ್ನು ಗೆಲ್ಲುವುದರಲ್ಲಿ ಯಾವುದೇ ಸಂದೇಹ ಇಲ್ಲ ಎಂದು ಹೇಳಿದರು.
ಕಾಂಗ್ರೆಸ್ ಮುಖಂಡರಲ್ಲೂ ತಮ್ಮ ಹೇಳಿಕೆ ಕುರಿತು ಅನುಮಾನ ಶುರುವಾಗಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಡ ಚುನಾವಣಾ ಫಲಿತಾಂಶ ಹಾಗೂ ಬಿಜೆಪಿ ಗೆಲುವು, ಮತ್ತೊಂದು ಕಡೆ ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಆದ ನಂತರ ಇಡೀ ದೇಶದಲ್ಲಿ, ಕರ್ನಾಟಕ ರಾಜ್ಯದಲ್ಲೂ ಸಹ ನಿರ್ಮಾಣವಾದ ವಾತಾವರಣದಿಂದ ಕಾಂಗ್ರೆಸ್ಸಿಗರು ಭಯಭೀತರಾಗಿದ್ದಾರೆ ಎಂದರು.