ಬೆಂಗಳೂರು: ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಗಾಂಜಾ ಹಾಗೂ ಇನ್ನಿತರ ಮಾದಕ ಸೇವನೆಗಳ ಹಾವಳಿಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕುರಿತು ಶಾಸಕ ದಿನೇಶ್ ಗೂಳಿಗೌಡ ಬರೆದಿದ್ದ ಪತ್ರಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ.
ಮಾದಕ ವ್ಯಸನಕ್ಕೆ ಒಳಗಾಗಿ ಹೆಚ್ಚಿನ ಸಂಖ್ಯೆಯ ಮಕ್ಕಳು ಬಲಿಯಾಗುತ್ತಿದ್ದಾರೆ, ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ದಿನೇಶ್ ಗೂಳಿಗೌಡ ಎಚ್ಚರಿಸಿ ಗಮನ ಸೆಳೆದಿದ್ದರು. ಜಿಲ್ಲಾ ಮಟ್ಟದಲ್ಲಿ ಗಾಂಜಾ ಹಾಗೂ ಮಾದಕ ವಸ್ತು ಸೇವನೆಗಳ ಹಾವಳಿ ನಿಯಂತ್ರಣಕ್ಕೆ ವಿಶೇಷ ದಳ ರಚನೆ ಮಾಡಬೇಕು ಹಾಗೂ ಇನ್ನಿತರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದರು.
ಈ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಶಿಕ್ಷಣ ಸಂಸ್ಥೆಗಳ ಸಮೀಪ ಸೇರಿದಂತೆ ರಾಜ್ಯದಲ್ಲಿ ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್ ಮಹಾನಿರ್ದೇಶಕರು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.





