Mysore
23
scattered clouds

Social Media

ಬುಧವಾರ, 15 ಜನವರಿ 2025
Light
Dark

ಮತಗಟ್ಟೆಗಳಲ್ಲಿ ಮೂಲಭೂತ ಸೌಲಭ್ಯವಿರಲಿ: ನೀರಜ್‌ ಕುಮಾರ್‌

ಮಂಡ್ಯ: ಸಾರ್ವಜನಿಕರು ಮತಗಟ್ಟೆಗೆ ಬಂದು ಮತದಾನ ಮಾಡುವಾಗ ಅವರಿಗೆ ಕುಡಿಯುವ ನೀರು, ಶೌಚಾಲಯ, ರ‍್ಯಾಂಪ್ ಸೇರಿದಂತೆ ವಿವಿಧ ರೀತಿಯ ಮೂಲಭೂತ ಸೌಲಭ್ಯವಿರಬೇಕು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಸಾಮಾನ್ಯ ಚುನಾವಣಾ ವೀಕ್ಷಕರಾರ ನೀರಜ್ ಕುಮಾರ್ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಲೋಕಸಭಾ ಚುನಾವಣೆಯ ಸಹಾಯಕ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳನ್ನು ಪರಿಶೀಲಿಸಿಕೊಳ್ಳಿ ಜೊತೆಗೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವಲ್ಲಿ ಶ್ರಮಿಸಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿಕಲಚೇತನರಿಗೆ ಮನೆಯಿಂದ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಅರ್ಹರಿಗೆ ಫಾರಂ 12 ಡಿ ನೀಡಿ ಸಮ್ಮತಿ ಪಡೆದಿರುವ ಬಗ್ಗೆ, ಮತದಾನಕ್ಕೆ ಮಾಡಿಕೊಂಡಿರುವ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದುಕೊಂಡ ವೀಕ್ಷಕರು. ಜಿಲ್ಲೆಯಲ್ಲಿ ಹೆಚ್ಚು ಮತದಾನ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿ, ಸಾರ್ವಜನಿಕರಿಗೆ ಮತದಾನದ ಮಹತ್ವದ ಬಗ್ಗೆ ತಿಳಿಸಿ ಎಂದರು.

ಚುನಾವಣೆಯಲ್ಲಿ ನಡೆಯುವ ಅಕ್ರಮಗಳ ಬಗ್ಗೆ ಸಾರ್ವಜನಿಕರು ಸಿ.ವಿಜಿಲ್ ಆ್ಯಪ್ ಮೂಲಕ ದೂರುಗಳನ್ನು ಸಲ್ಲಿಸಬಹುದಾಗಿದ್ದು, ಬಂದ ದೂರುಗಳನ್ನು 100 ನಿಮಿಷದಲ್ಲಿ ವಿಲೇವಾರಿ ಮಾಡಬೇಕು. ಯಾವುದೇ ಚುನಾವಣಾ ಅಕ್ರಮಗಳಿಗೆ ಅವಕಾಶ ನೀಡದಂತೆ ಚುನಾವಣಾ ಪ್ರಚಾರಗಳಿಗೆ ಬಳಸುವ ವಸ್ತುಗಳನ್ನು ಸರಿಯಾಗಿ ಲೆಕ್ಕ ಮಾಡಿ ವರದಿಯನ್ನು ವೆಚ್ಚವೀಕ್ಷಕರಿಗೆ ಒದಗಿಸಿ ಎಂದರು.

ಜಿಲ್ಲಾಧಿಕಾರಿ ಡಾ: ಕುಮಾರ ಅವರು ವೀಕ್ಷಕರುಗಳಿಗೆ ಚುನಾವಣೆಗೆ ಸಂಬಂಧಿಸಿದಂತೆ ವಿವಿಧ ನೋಡಲ್ ಅಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳ ನೇಮಕ, ಮತದಾರರ ಸಂಖ್ಯೆ, ಮತಗಟ್ಟೆಗಳು, ಸೂಕ್ಷ್ಮ ಮತಗಟ್ಟೆ, ಚೆಕ್ ಪೋಸ್ಟ್, 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿಕಲಚೇತನರಿಗೆ ಮನೆಯಿಂದ ಮತದಾನ ಮಾಡಲು ಮಾಡಿರುವ ವ್ಯವಸ್ಥೆಗಳ ಬಗ್ಗೆ ವಿವರಿಸಿದರು.

ಚುನಾವಣಾ ವೆಚ್ಚ ವೀಕ್ಷಕರಾದ ಕುಮಾರ್ ಪ್ರಿಯತಮ್ ಅಶೋಕ್, ರೋಹಿತ್ ಅಸುದಾನಿ, ಪೊಲೀಸ್ ವೆಚ್ಚ ವೀಕ್ಷಕರಾದ ದೀಪ ಸತ್ಯನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಸಂಜೀವಪ್ಪ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Tags: