Mysore
22
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

ಅಂಗನವಾಡಿಯತ್ತ ತೆರಳಿದ ಚಿಣ್ಣರು- ಸಿಹಿ ತಿನಿಸಿ ಆತ್ಮೀಯವಾಗಿ ಸ್ವಾಗತಿಸಿದ ಸಿಇಒ

ಮಂಡ್ಯ: ಜಿಲ್ಲೆಯಾದ್ಯಂತ ಇಂದಿನಿಂದ(ಮೇ.೨೭) ಅಂಗನವಾಡಿ ಕೇಂದ್ರಗಳು ಪುನರಾರಂಭವಾಗಿದ್ದು, ಪುಟ್ಟ ಪುಟ್ಟ ಮಕ್ಕಳು ಅಂಗನವಾಡಿ ಕೇಂದ್ರಗಳತ್ತ ಹೆಚ್ಚೆ ಹಾಕಿದರು. ಈ ವೇಳೆ ಮಂಡ್ಯ ತಾಲ್ಲೂಕಿನ ಎಂ,ಜಿ. ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಅಧಿಕಾರಿಗಳು ಮಕ್ಕಳಿಗೆ ಸಿಹಿಯನ್ನು ನೀಡಿ, ಆತ್ಮೀಯವಾಗಿ ಬರಮಾಡಿಕೊಂಡರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಅಸೀಫ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಸ್.ರಾಜಮೂರ್ತಿ ನೇತೃತ್ವದಲ್ಲಿ ಕೇಕ್ ಕತ್ತರಿಸಿ ಮಕ್ಕಳಿಗೆ ತಿನ್ನಿಸಿ ಶುಭ ಕೋರಿದರು. ಅಂಗನವಾಡಿಗೆ ಬಂದ ಮಕ್ಕಳಿಗೆ ಗುಲಾಬಿ ಹೂವುಗಳನ್ನು ನೀಡಿ ಸ್ವಾಗತಿಸಿದರು.

ಇದೇ ಸಂದರ್ಭದಲ್ಲಿ ಕಲಿಕಾ ಕೇಂದ್ರ ಹಾಗೂ ತರಗತಿ ಕೊಠಡಿಗೆ ಚಾಲನೆ ನೀಡಿ. ಮಕ್ಕಳಿಗೆ ಗುಣಮಟ್ಟ ಶಿಕ್ಷಣವನ್ನು ನೀಡಲು ಅಂಗನವಾಡಿ ಶಿಕ್ಷಕಿಯರಿಗೆ ಸೂಕ್ತ ತರಬೇತಿಯನ್ನು ನೀಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸಿಇಓ ನಿರ್ದೇಶನ ನೀಡಿದರು.

ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಅಸೀಫ್ ಮಾತನಾಡಿ, ಬೇಸಿಗೆ ರಜಾ ನಂತರ ಮಕ್ಕಳು ಮತ್ತೆ ಮರಳಿ ಅಂಗನವಾಡಿ ಕೇಂದ್ರಗಳತ್ತ ಬಂದಿದ್ದಾರೆ. ಜಿಲ್ಲೆಯಲ್ಲಿರುವ 588 ಅಂಗನವಾಡಿ ಕೇಂದ್ರಗಳನ್ನು ಸ್ವಚ್ಛಗೊಳಿಸಿ ಸಿದ್ದಗೊಳಿಸಲಾಗಿದೆ. ಮಕ್ಕಳಿಗೆ ಕುದಿಸಿ ಆರಿಸಿದ ನೀರನ್ನು ಒದಗಿಸುವಂತೆ ಸೂಚನೆ ನೀಡಲಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಹತ್ತಿರದ ಅಂಗನವಾಡಿ ಕೇಂದ್ರಗಳಿಗೆ ಕಳುಹಿಸಿ ಪೌಷ್ಢಿಕಾಂಶ ಆಹಾರದ ಜೊತೆಗೆ ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಮನವಿ ಮಾಡಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ಆರ್.ಕುಮಾರಸ್ವಾಮಿ ನೇತೃತ್ವದಲ್ಲಿ ಮಂಡ್ಯ ತಾಲೂಕಿನ ಹೊಸ ಬೂದನೂರು. ಮಂಡ್ಯ ನಗರದಲ್ಲಿರುವ ಶಂಕರಮಠ . ಎಸ್.ಡಿ.ಜಯರಾಂ ಬಡಾವಣೆಯಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳಿಗೆ ಹೂ. ಸಿಹಿ ವಿತರಿಸಿ ಆತ್ಮೀಯವಾಗಿ ಶಾಲೆಗೆ ಬರಮಾಡಿಕೊಂಡರು.

Tags:
error: Content is protected !!