ಬೆಂಗಳೂರು: ರಾಜ್ಯದ ಬೇಡಿಕೆಗಳ ಬಗ್ಗೆ ಧ್ವನಿ ಎತ್ತುವ ಸಂಬಂಧ ಸಿಎಂ ಸಿದ್ದರಾಮಯ್ಯ ನಾಳೆಯಿಂದ ಮೂರು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಂಡಿದ್ದಾರೆ.
ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬರಬೇಕಾಗಿರುವ ಉಳಿದ ಬರ ಪರಿಹಾರ ಹಣ ಹಾಗೂ ಇನ್ನಿತರ ಬೇಡಿಕೆಗಳನ್ನು ಕೇಳಲು ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಈ ಸಂಬಂಧ ಸಂಜೆ ಎಲ್ಲಾ ಕಾಂಗ್ರೆಸ್ ಸಂಸದರ ಜೊತೆ ಸಿಎಂ ಸಿದ್ದು ಚರ್ಚೆ ನಡೆಸಲಿದ್ದು, ಸಂಸದರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.
ರಾಜ್ಯಕ್ಕೆ ಕೇಂದ್ರ ಸರ್ಕಾರ ಮೋಸ ಮಾಡಿದೆ. ಬಾಕಿ ಉಳಿದ ಬರ ಪರಿಹಾರವನ್ನು ನಮಗೆ ಕೊಟ್ಟಿಲ್ಲ. ಕೇಂದ್ರ ಸರ್ಕಾರ ನಮಗೆ ಬರಬೇಕಿರುವ ಎಲ್ಲಾ ಪರಿಹಾರವನ್ನು ತಡೆಹಿಡಿದಿದೆ. ಹೀಗಾಗಿ ನಾಳೆಯಿಂದ ಮೂರು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಂಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ದೆಹಲಿಯಲ್ಲಿ ಜೂನ್.28 ಹಾಗೂ 29ರಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದು, ರಾಜ್ಯದ ಅಭಿವೃದ್ಧಿ ಬಗ್ಗೆ ಸುದೀರ್ಘ ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು, ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಶುಭ ಕೋರಲಿದ್ದು, ಅಲ್ಲಿಯೂ ರಾಜ್ಯದ ಸಂಪೂರ್ಣ ವಿವರವನ್ನು ಚರ್ಚೆ ನಡೆಸಲಿದ್ದಾರೆ.