ಸರಗೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನಲ್ಲಿ ಭಾರೀ ಮಳೆ ಸುರಿಯುತ್ತಿದೆ.
ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನಲ್ಲಿ ಕಳೆದ ಎರಡು ದಿನಗಳಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಭಾರೀ ಮಳೆಯಿಂದ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಸ್ಥಿತಿ ನಿರ್ಮಾಣವಾಗಿದೆ.
ಇನ್ನೂ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಚಳಿಯ ವಾತಾವರಣ ನಿರ್ಮಾಣವಾಗಿದ್ದು, ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ.
ಮಳೆ ಇನ್ನೂ ಐದು ದಿನಗಳವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಜಲಾಶಯಗಳ ಒಳಹರಿವಿನ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡು ಬಂದಿದೆ.
ಮಳೆ ಜಾಸ್ತಿಯಾದ ಪರಿಣಾಮ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಮತ್ತು ತಾರಕ ಹಾಗೂ ಸರಗೂರು ತಾಲ್ಲೂಕಿನ ನುಗು ಜಲಾಶಯಗಳು ಭರ್ತಿಯತ್ತ ಸಾಗುತ್ತಿದ್ದು, ಅನ್ನದಾತರ ಮೊಗದಲ್ಲಿ ಭಾರೀ ಮಂದಹಾಸ ಮನೆಮಾಡಿದೆ.
ಮಳೆ ಹಿಗೇಯೇ ಮುಂದುವರಿದರೆ ಎಲ್ಲಾ ಜಲಾಶಯಗಳು ಸಂಪೂರ್ಣ ಭರ್ತಿಯಾಗಲಿದ್ದು, ರೈತರು ಈ ಬಾರಿಯಾದರೂ ನಾಲೆಗಳ ನೀರನ್ನು ನಂಬಿ ಉತ್ತಮ ಬೆಳೆ ಬೆಳೆಯಲು ಅನುಕೂಲವಾಗಲಿದೆ ಎನ್ನಲಾಗಿದೆ.





