ನವದೆಹಲಿ: 18ನೇ ಸಾರ್ವತ್ರಿಕ ಚುನಾವಣಾ ಬಳಿಕ ಲೋಕಸಭಾ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಶನಿವಾರ (ಜೂನ್.29) ಭೇಟಿಯಾಗಿ ಶುಭ ಕೋರಿದರು.
ರಾಹುಲ್ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅಂಡ್ ಟೀಂ ಕುಶಲೋಪಾಯ ವಿಚಾರಿಸಿದರು.
ಇನ್ನು ರಾಹುಲ್ ಗಾಂಧಿ ಭೇಟಿಯಾದ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, “ಲೋಕಸಭಾ ವಿರೋಧ ಪಕ್ಷದ ನಾಯಕನಾಗಿ ಮೊದಲ ಬಾರಿಗೆ ಆಯ್ಕೆಯಾದ ರಾಹುಲ್ ಗಾಂಧಿ ಅವರನ್ನು ರಾಗಾರ ದೆಹಲಿ ನಿವಾಸದಲ್ಲಿ ಭೇಟಿಯಾಗಿ ಅಭಿನಂದಿಸಲು ಸಂತೋಷವಾಗಿದೆ” ಎಂದು ಫೋಟೋ ಒಂದನ್ನು ಹಂಚಿಕೊಂಡು ಬರೆದುಕೊಂಡಿದ್ದಾರೆ.
ಭೇಟಿಯಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಹೆಚ್.ಸಿ.ಮಹದೇವಪ್ಪ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರುಗಳಾದ ದರ್ಶನ್ ದ್ರುವನಾರಾಯಣ್, ಅನಿಲ್ ಚಿಕ್ಕಮಾದು, ಹರೀಶ್ ಗೌಡ, ಗಣೇಶ್ ಪ್ರಸಾದ್ ಉಪಸ್ಥಿತರಿದ್ದರು.