ಬೆಂಗಳೂರು: ಕಳೆದ ವರ್ಷ ಡಿಸೆಂಬರ್.27ರಂದು ಕನ್ನಡ ನಾಮಫಲಕ ಅನುಷ್ಠಾನಕ್ಕಾಗಿ ದೇಶದಾದ್ಯಂತ ದೊಡ್ಡ ಸಂಚಲನ ಮೂಡಿಸಿದ್ದ ಚಳುವಳಿ ಕೈಗೊಂಡಿದ್ದ ಕರ್ನಾಟಕ ರಕ್ಷಣಾ ವೇದಿಕೆ ಈಗ ಮತ್ತೊಂದು ಬಹುದೊಡ್ಡ ಹೋರಾಟಕ್ಕೆ ಸಜ್ಜಾಗಿದೆ.
ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ಎಂಬ ಘೋಷಣೆಯೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಚಳುವಳಿ ಆರಂಭಿಸಲಿದ್ದು, ಮುಂದಿನ ಸೋಮವಾರ ಅಂದರೆ ಜುಲೈ.1ರಂದು ರಾಜ್ಯಾದ್ಯಂತ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದೆ. ಸಾವಿರಾರು ಕರವೇ ಕಾರ್ಯಕರ್ತರು ಇದರಲ್ಲಿ ಪಾಲ್ಗೊಳ್ಳಿದ್ದಾರೆ ಎಂದು ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದ ಎಲ್ಲಾ ಬಗೆಯ ಉದ್ಯೋಗದಲ್ಲಿ ಕನ್ನಡಿಗರದೇ ಸಿಂಹಪಾಲು ಇರಬೇಕೆಂಬುದು ನ್ಯಾಯಯುತವಾದ ಬೇಡಿಕೆ. ಇದಕ್ಕಾಗಿಯೇ ಡಾ.ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಲಾಗಿತ್ತು. ಆದರೆ ಖಾಸಗಿ ವಲಯ ದೊಡ್ಡದಾಗಿ ಬೆಳೆದ ಹಿನ್ನೆಲೆಯಲ್ಲಿ ಡಾ.ಸರೋಜಿನಿ ಮಹಿಷಿ ವರದಿ ಸಮರ್ಪಕವಾಗಿ ಜಾರಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಕನ್ನಡದ ಯುವ ಸಮುದಾಯ ಉದ್ಯೋಗವಿಲ್ಲದೇ ಬಳಲುವಂತಾಗಿದೆ.
ಕರ್ನಾಟಕಕ್ಕೆ ಹೊರ ರಾಜ್ಯಗಳಿಂದ ಅವ್ಯಾಹತವಾಗಿ ವಲಸೆ ನಡೆಯುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಇದು ತೀವ್ರ ಸ್ವರೂಪ ಪಡೆದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಮಹಾನಗರಗಳು ವಲಸಿಗರ ಹಾವಳಿಯಿಂದ ಸಂಪೂರ್ಣ ಬದಲಾಗುತ್ತಿವೆ. ಕನ್ನಡಿಗರ ಉದ್ಯೋಗವನ್ನು ಹೊರರಾಜ್ಯದವರು ಕಿತ್ತುಕೊಳ್ಳುತ್ತಿದ್ದಾರೆ. ಕನ್ನಡಿಗರು ತಮ್ಮ ನೆಲದಲ್ಲೇ ನಿರುದ್ಯೋಗಿಗಳಾಗುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ದೊಡ್ಡ ಪ್ರಮಾಣದ ಚಳುವಳಿಗೆ ಸಜ್ಜಾಗಿದೆ ಎಂದು ನಾರಾಯಣಗೌಡ ಹೇಳಿದ್ದಾರೆ.
ನಾವು ಈಗ ಎಚ್ಚೆತ್ತುಕೊಳ್ಳದಿದ್ದರೆ ಕಾಲ ಮಿಂಚಿ ಹೋಗುತ್ತದೆ. ನಾವು ಮಾಡಿದ ತಪ್ಪುಗಳಿಗಾಗಿ ನಮ್ಮ ಬೇಜಾವಾಬ್ದಾರಿಗೆ ನಮ್ಮ ಮುಂದಿನ ಪೀಳಿಗೆ ನಮ್ಮನ್ನು ಶಪಿಸುವ ಕಾಲ ಬರುತ್ತದೆ. ಹೀಗಾಗಿ ಕನ್ನಡಿಗರನ್ನು, ಕನ್ನಡಿಗರ ಬದುಕನ್ನು ಉಳಿಸುವ ಕಾರ್ಯವನ್ನು ನಾವು ಮಾಡಲೇಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಜುಲೈ.1ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಂಡು, ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸಮಗ್ರ ಕಾಯ್ದೆ ರೂಪಿಸಲು ಆಗ್ರಹಿಸಲಿದೆ ಎಂದು ನಾರಾಯಣಗೌಡ ತಿಳಿಸಿದ್ದಾರೆ.