Mysore
19
overcast clouds
Light
Dark

ಕರ್ನಾಟಕದಲ್ಲಿ ಡೆಂಗ್ಯೂ ಮೂರು ಪಟ್ಟು ಹೆಚ್ಚಳ: ಈವರೆಗೂ 7 ಸಾವಿರ ಜನರಲ್ಲಿ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಇನ್ನು ಕಳೆದ ವರ್ಷಕ್ಕೆ ಹೋಲಿಸಿದರೆ ಡೆಂಗ್ಯೂ ಮೂರು ಪಟ್ಟು ಹೆಚ್ಚು ವರದಿಯಾಗಿದೆ.

ರಾಜ್ಯದಲ್ಲಿ ಇದುವರೆಗೂ 53,866 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಈ ಪೈಕಿ 7006 ಮಂದಿಯಲ್ಲಿ ರೋಗ ದೃಢಪಟ್ಟಿದೆ. 352 ಸಕ್ರಿಯ ಪ್ರಕರಣಗಳಿದ್ದು, ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಲೇ ಇದೆ.

ಕಳೆದ ವರ್ಷ ಇದೇ ಅವಧಿಯಲ್ಲಿ ರಾಜ್ಯದಲ್ಲಿ 2432 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದವು. ಆದರೆ, ಯಾವುದೇ ಸಾವು-ನೋವು ಸಂಭವಿಸಿರಲಿಲ್ಲ. ಈ ಬಾರಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏಳು ಸಾವಿರ ಗಡಿ ದಾಟಿದೆ. ಈ ಮೂಲಕ ಕಳೆದ ವರ್ಷಕ್ಕಿಂತ ಮೂರುಪಟ್ಟು ಹೆಚ್ಚಿದೆ.

ಈ ಹಿನ್ನೆಲೆಯಲ್ಲಿ ಡೆಂಗ್ಯೂ ಬಗ್ಗೆ ಎಲ್ಲರೂ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಮನೆಯ ಸುತ್ತಮುತ್ತ ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ರೋಗ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ವಹಿಸದೇ ತಪಾಸಣೆಗೆ ಒಳಗಾಗಬೇಕು ಎಂದು ಮನವಿ ಮಾಡಿದೆ.