ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಿವೇಶನ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿವೃತ್ತ ನ್ಯಾಯಧೀಶರ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚಿಸಲಾಗಿದೆ.
ನಾಳೆಯಿಂದ ಆರಂಭವಾಗಲಿರುವ ಮುಂಗಾರು ಅಧಿವೇಶನದಲ್ಲಿ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಹೋರಾಟ ಮಾಡಬಹುದಾದ ಹಿನ್ನೆಲೆ ಎಚ್ಚೆತ್ತ ಸರ್ಕಾರ ನಿವೃತ್ತ ನ್ಯಾಯಾಧೀಶ ಪಿ.ಎಸ್ ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ.
ಒಳಾಡಳಿತ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ನಾಗರಾಜ್ ಅವರು ಆದೇಶನ ಹೊರಡಿಸಿದ್ದಾರೆ. ಹಾಗೂ ಈ ಪ್ರಕರಣ ಸಂಬಂಧ 6 ತಿಂಗಳೊಳಗೆ ವರದಿ ನೀಡುವಂತೆ ಮನವಿ ಮಾಡಿದ್ದಾರೆ.
ವಿಚಾರಣೆಗೆ ಸಂಬಂಧಪಟ್ಟಂತೆ ನಗರಾಬೀವೃದ್ಧಿ ಇಲಾಖೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಆಯೋಗ ಅಪೇಕ್ಷಿಸುವ ಎಲ್ಲಾ ದಾಖಲಾತಿಗಳು/ಕಡತಗಳು ಇತ್ಯಾದಿಗಳನ್ನು ಒದಗಿಸಬೇಕು ಹಾಗೂ ಅದೇ ವೇಳೆಯಲ್ಲಿ ಸ್ಥಳದಲ್ಲಿ ಹಾಜರಿದ್ದು, ವಿಚಾರಣಾ ಆಯೋಗದೊಂದಿಗೆ ಸೋಪೂರ್ಣವಾಗಿ ಸಹಕರಿಸಬೇಕು ಎಂದು ಸೂಚಿಸಲಾಗಿದೆ.
50:50 ಅನುಪಾತದಲ್ಲಿ ಮುಡಾದಲ್ಲಿ ನಿವೇಶನ ಹಂಚಿಕೆಯಲ್ಲಿ ಭಾರೀ ಅಕ್ರಮಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಪರಸ್ಪರ ಟೀಕೆ ಮಾಡುತ್ತಿದ್ದರು. ಈ ಬಗ್ಗೆ ವಿರೋಧ ಪಕ್ಷಗಳು ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಮುಡಾ ಅಕ್ರಮ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದ ಹಿನ್ನೆಲೆ ಸರ್ಕಾರ ತಿನಿಖೆಗೆ ವಿಶೇಷ ನಿಯೋಗ ರಚಿಸಿ ಆದೇಶ ಹೊರಡಿಸಿದೆ.





