ಮಡಿಕೇರಿ: ಧಾರಾಕಾರ ಮಳೆಯಿಂದ ಹಾನಿ ಆಗಿರುವ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಶುಕ್ರವಾರ(ಜು.19) ತಡರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿಧಾನಮಂಡಲ ಅಧಿವೇಶನ ಮುಗಿಸಿದ ಕೂಡಲೇ ಸ್ವಕ್ಷೇತ್ರಕ್ಕೆ ತೆರಳಿಸ ಶಾಸಕ ನೇರವಾಗಿ ಕುಶಾಲನಗರ ಪುರಸಭೆ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶ, ಜಲಾವೃತಗೊಂಡಿರುವ ಜಾಗಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರವಾಹ ಪರಿಸ್ಥಿತಿ ನಿರ್ವಹಣೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ಥರಿಗೆ ಹಾಗೂ ಸ್ಥಳೀಯ ನಿವಾಸಿಗಳಿಗೆ ಧೈರ್ಯ ತುಂಬಿದರು. ಜತೆಗೆ ಅತ್ಯಗತ್ಯವಾಗಿ ಬೇಕಾದ ಮೂಲಭೂತ ಸೌಕರ್ಯಗಳು ಹಾಗೂ ತಾತ್ಕಾಲಿಕವಾಗಿ ವಾಸಿಸಲು ಬೇಕಾದ ವ್ಯವಸ್ಥೆ, ಆಹಾರ ಪದಾರ್ಥಗಳನ್ನು ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂಧರ್ಭ ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ, ಡಿವೈಎಸ್ಪಿ ಗಂಗಾಧರಪ್ಪ, ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ ಶಶಿಧರ್, ಕೂಡ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡೂರಾವ್ ಹಾಗೂ ಪೋಲೀಸ್ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.