ಮಡಿಕೇರಿ: ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಸಂತ್ರಸ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯವಿರು ಸೌಲಭ್ಯಗಳನ್ನು ಒದಗಿಸುವಂತೆ ಹಾಗೂ ಕ್ಷಿಪ್ರ ನೆರವಿಗೆ ಸಜ್ಜಾಗಿರುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಭೋಸರಾಜು ಕೊಡಗು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.
ಇಂದು ಕೊಡುಗು ಜಿಲ್ಲೆಯ ಸಿದ್ದಾಪುರದಲ್ಲಿ ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಹಾಗೂ ಪ್ರವಾಹ ಪೀಡಿತ ಪ್ರದೇಶವಾದ ಕರಡಿಗೋಡು ಪ್ರದೇಶಕ್ಕೆ ತೆರಳಿ ಪರಿಶೀಲನೆ ನಡೆಸಿ ಮಾತನಾಡಿದರು.
ಸಿದ್ದಾಪುರದಲ್ಲಿ ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿದ ಅವರು ಸಂತ್ರಸ್ತರ ಅಹವಾಲು ಆಲಿಸಿದರು. ಊಟೋಪಾಚಾರ, ಆರೋಗ್ಯ ಸೇವೆ ಇತರ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆಯೇ ಎಂದು ಮಾಹಿತಿ ಪಡೆದರು. ಪ್ರವಾಹ ಪೀಡಿತ ಪ್ರದೇಶದಿಂದ ಸ್ಥಳಾಂತರವಾಗುವ ಬಗ್ಗೆ ಸಂತ್ರಸ್ತರ ಅಭಿಪ್ರಾಯ ಪಡೆದುಕೊಂಡರು.
ಇದಕ್ಕೆ ಪ್ರಕ್ರಿಯಿಸಿದ ಸಂತ್ರಸ್ತರು ಪ್ರತೀ ವರ್ಷ ಮಳೆಗಾಲ ಸಂದರ್ಭದಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಜೀವನ ನಡೆಸುವುದು ದುಸ್ತರವಾಗಿದೆ. ಬದುಕು ಕಟ್ಟಿಕೊಳ್ಳಲು ತುಂಬಾ ತೊಂದರೆಯಾಗಿದೆ. ಆದ್ದರಿಂದ ನಿವೇಶನ ಒದಗಿಸಿ ಸ್ಥಳಾಂತರಿಸುವಂತೆ ಕೋರಿದರು.
ಕಾಳಜಿ ಕೇಂದ್ರದಲ್ಲಿ ಅಗತ್ಯ ಸೌಕರ್ಯಗಳನ್ನು ಕಲ್ಪಿಸಬೇಕು. ಆರೋಗ್ಯ ಸೇವೆ ಸೇರಿದಂತೆ ಯಾವುದೇ ರೀತಿಯ ತೊಂಧರೆಗಳ ಆಗದೇ ಇರುವಂತಹ ರೀತಿಯಲ್ಲಿ ಗಮನಹರಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಬಳಿಕ ಕರಡಿಗೋಡು ಪ್ರವಾಹ ಪೀಡಿತ ಪ್ರದೇಶಕ್ಕೆ ತೆರಳಿ ಅಲ್ಲಿನ ಸಂತ್ರಸ್ತರ ಅಹವಾಲು ಆಲಿಸಿದರು.
ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಸಂತ್ರಸ್ತರಿಗೆ ನಿವೇಶನ ಒದಗಿಸುವ ಸಂಬಂಧ ಆದಷ್ಟು ಶೀಘ್ರ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಕರಡಿಗೋಡು ನದಿ ದಡದಲ್ಲಿ ಸುಮಾರು 70 ಕ್ಕೂ ಹೆಚ್ಚು ಕುಟುಂಬಗಳು ಇದ್ದು, ಪ್ರತಿ ವರ್ಷ ಪ್ರವಾಹ ಪರಿಸ್ಥಿತಿ ಎದುರಾಗುವುದರಿಂದ ಜೀವನ ನಡೆಸುವುದು ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು. ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಚಿವರು ಸದ್ಯದಲ್ಲೇ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.
ಮಾಲ್ದಾರೆ ವ್ಯಾಪ್ತಿಯಲ್ಲಿ ಸಂತ್ರಸ್ತರಿಗಾಗಿ 10 ಎಕರೆ ಜಾಗ ಗುರುತು ಮಾಡಲಾಗಿದ್ದು, ಈ ಸಂಬಂಧ ಆದಷ್ಟು ಶೀಘ್ರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.
ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ತಹಶೀಲ್ದಾರ್ ರಾಮಚಂದ್ರ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಇತರರು ಇದ್ದರು.