ವಿಜಯನಗರ: ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯದಿಂದ ನದಿಗೆ ನೀರನ್ನು ಹರಿಸಲಾಗಿದ್ದು, ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಇನ್ನು ಮೂರು ದಿನಗಳಲ್ಲಿ ಡ್ಯಾಂ ಸಂಪೂರ್ಣ ಭರ್ತಿಯಾಗಲಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.
ಜಲಾಶಯ ಭರ್ತಿಯಾದ ಬಳಿಕ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ತುಂಗಭದ್ರಾ ನದಿ ಪಾತ್ರದ ಜನರು ಬಹಳ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಜಲಾಶಯಕ್ಕೆ ಪ್ರಸ್ತುತ 1.2 ಲಕ್ಷ ಕ್ಯೂಸೆಕ್ಸ್ ನೀರಿನ ಒಳಹರಿವು ಇದ್ದು, ಮುಂದಿನ ಮೂರು ಅಥವಾ ನಾಲ್ಕು ದಿನಗಳು ಇದೇ ರೀತಿ ಇರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.