ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯ ಮುಂಗಾರು ಆರಂಭದಲ್ಲೇ ತುಂಬಿದ್ದು, ಭಾರೀ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಹೀಗಾಗಿ ಕಾವೇರಿ ನದಿ ತೀರ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಸೋಮವಾರ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನದಿ ತೀರದಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಮುತ್ತತ್ತಿ ಭಾಗದಲ್ಲಿ ಪ್ರವಾಸಿಗರು ಹೆಚ್ಚು ಭೇಟಿ ನೀಡುತ್ತಾರೆ. ಕೆ.ಆರ್.ಎಸ್ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ ಮಾಡುತ್ತಿರುವ ಹಿನ್ನಲೆಯಲ್ಲಿ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರು ಎಚ್ಚರಿಕೆಯಿಂದರಬೇಕು ಎಂದು ಸೂಚಿಸಿದರು.
ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿಯ ಒಳಗೆ ಇಳಿಯುವುದು, ಸೆಲ್ಫಿ ತೆಗೆದುಕೊಳ್ಳುವುದು ಮುಂತಾದ ಪ್ರಕ್ರಿಯೆಗಳಿಗೆ ಕೈಹಾಕಿ ಜೀವಕ್ಕೆ ತೊಂದರೆ ಮಾಡಿಕೊಳ್ಳಬೇಡಿ. ಜಿಲ್ಲಾಡಳಿತದಿಂದ ಎಚ್ಚರಿಕೆ ಫಲಕಗಳನ್ನು ಅಳವಡಿಸಿದ್ದು, ಅವುಗಳನ್ನು ಪಾಲಿಸಿ ಎಂದರು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.