ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜುಲೈ.29ಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಸಲ್ಲಿಸಲಿದ್ದಾರೆ.
ಕಾವೇರಿ ಜಲಾನಯದ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಅನ್ನದಾತರ ಮೊಗದಲ್ಲಿ ಸಂತಸ ಮನೆಮಾಡಿದೆ.
ಇನ್ನು ಕೆಆರ್‌ಎಸ್ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜುಲೈ.29ರಂದು ಬೆಳಿಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಬಾಗಿನ ಸಲ್ಲಿಸಲಿದ್ದಾರೆ. ಅಂದು ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಮಂಡ್ಯ ಮತ್ತು ಮೈಸೂರು ಜಿಲ್ಲೆಯ ಶಾಸಕರು ಸೇರಿದಂತೆ ಜಲಸಂಪನ್ಮೂಲ ಇಲಾಖೆಯ ಉನ್ನತ ಅಧಿಕಾರಿಗಳು ಕೂಡ ಪಾಲ್ಗೊಳ್ಳಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಕೆಆರ್‌ಎಸ್ ಜಲಾಶಯಕ್ಕೆ ಬಾಗಿನ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕುಮಾರ್, ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ಸೇರಿದಂತೆ ಹಲವರು ಜಲಾಶಯಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮುಂಜಾಗ್ರತಾ ಕ್ರಮ ಹಾಗೂ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.





