ಮೈಸೂರು: ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಪರಿಣಾಮ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡಿನ ಹೆಮ್ಮಿಗೆ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ.
ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.
ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾದ ಪರಿಣಾಮ ಡ್ಯಾಂನಿಂದ 1.30 ಲಕ್ಷ ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ.
ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಜೀವನದಿ ಕಾವೇರಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಪ್ರವಾಹ ಭೀತಿ ಎದುರಿಸುತ್ತಿವೆ.
ಕಾವೇರಿ ತನ್ನ ಉದ್ದಗಲಕ್ಕೂ ಆರ್ಭಟಿಸುತ್ತಿದ್ದು, ನದಿಗೆ ಇಳಿಯದಂತೆ ಜನರಿಗೆ ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಇನ್ನೂ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡಿನ ಹೆಮ್ಮಿಗೆ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ವಾಹನಗಳ ಸಂಚಾರವನ್ನು ಬಂದ್ ಮಾಡಲಾಗಿದೆ.
ಸೇತುವೆ ಮುಳುಗಡೆಯಾಗಿರುವ ಪರಿಣಾಮ ಸೇತುವೆ ಎರಡೂ ಬದಿಯಲ್ಲಿ ಪೊಲೀಸರು ಬೀಡುಬಿಟ್ಟಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ.
ಸೋಸಲೆ, ಪೂರಿಗಾಲಿ, ಮುಡುಕುತೊರೆ ಮೂಲಕ ತಲಕಾಡಿಗೆ ಸಂಚಾರ ಮಾಡುವ ಸೇತುವೆ ಇದಾಗಿದ್ದು, ವಾಹನ ಸವಾರರಿಗೆ ಬದಲಿ ರಸ್ತೆಯ ವ್ಯವಸ್ಥೆಯನ್ನು ಮಾಡಲಾಗಿದೆ.