ಬೆಳಗಾವಿ: ಬೆಳಗಾವಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬೆಳಗಾವಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಪ್ರವಾಹ ಆವರಿಸಿದೆ. ಈ ಹಿನ್ನೆಲೆಯಲ್ಲಿ ಗೋಕಾಕ್, ಮೂಡಲಗಿ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ಮತ್ತು ನಾಳೆ ರಜೆ ನೀಡಿ ಆದೇಶ ಹೊರಡಿಸಲಾಗಿದೆ.
ಇನ್ನು ನೆರೆ ಸಂತ್ರಸ್ತರಿಗಾಗಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡ ಜನರಿಗೂ ಕೂಡ ಆಹಾರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಇನ್ನೂ ಪ್ರವಾಹದಿಂದ ರಸ್ತೆ ಸಂಪರ್ಕ ಕಡಿತಗೊಂಡ ನಿಪ್ಪಾಣಿ, ಕಾಗವಾಡ, ಹುಕ್ಕೇರಿ ಹಾಗೂ ಚಿಕ್ಕೋಡಿ ತಾಲ್ಲೂಕುಗಳ ಶಾಲೆಗಳಿಗೂ ರಜೆ ನೀಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಮಳೆ ಸಂಪೂರ್ಣ ನಿಲ್ಲುವವರೆಗೂ ಹಾಗೂ ಪ್ರವಾಹ ಪರಿಸ್ಥಿತಿ ಕಡಿಮೆಯಾಗುವವರೆಗೂ ಮಕ್ಕಳನ್ನು ಜೋಪಾನವಾಗಿ ನೋಡಿಕೊಳ್ಳಬೇಕು ಎಂದು ಪೋಷಕರಿಗೆ ಮನವಿ ಮಾಡಲಾಗಿದೆ.