ಎಚ್.ಡಿ.ಕೋಟೆ: ಕಬಿನಿ ಜಲಾಶಯ ನಮ್ಮೆಲ್ಲರ ಮರ್ಯಾದೆ ಉಳಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.
ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾದ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಸಂಪೂರ್ಣ ಭರ್ತಿಯಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಕಬಿನಿ ಜಲಾಶಯಕ್ಕೆ ಭೇಟಿ ನೀಡಿ ಬಾಗಿನ ಸಮರ್ಪಿಸಿದರು.
ಬಾಗಿನ ಸಮರ್ಪಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಕಬಿನಿ ಜಲಾಶಯ ನಮ್ಮೆಲ್ಲರ ಮರ್ಯಾದೆ ಉಳಿಸಿದೆ. ನೆರೆಯ ತಮಿಳುನಾಡು ರಾಜ್ಯಕ್ಕೆ ನಾವು ನೀರು ಬಿಡಬೇಕಿತ್ತು. ಕಬಿನಿ ಜಲಾಶಯ ಮೊದಲು ಭರ್ತಿಯಾಗಿದ್ದಕ್ಕೆ ತಮಿಳುನಾಡಿಗೆ ನೀರನ್ನು ಹರಿಸಲಾಗಿದೆ. ಈ ಹಿನ್ನೆಲೆಯಲ್ಲಿ ತುಂಬಾ ಸಂತೋಷದಿಂದ ನಾನು, ಸಿಎಂ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದೇವೆ ಎಂದು ಖುಷಿಪಟ್ಟರು.