ನವದೆಹಲಿ: ಕೆಲ ಕಾರಣಗಳಿಂದ ಬೆಂಗಳೂರು ಟು ಮೈಸೂರು ಬಿಜೆಪಿ ಪಾದಯಾತ್ರೆಗೆ ಬೆಂಬಲ ಇಲ್ಲ ಎಂದು ಹೇಳಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಮನವೊಲಿಸುವಲ್ಲಿ ಬಿಜೆಪಿ ಹೈಕಮಾಂಡ್ ಯಶಸ್ವಿಯಾಗಿದೆ.
ಈ ಮೂಲಕ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್ ನಾಯಕರು ಆಗಸ್ಟ್.3ರಿಂದ ಪಾದಯಾತ್ರೆ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರಕ್ಕೆ ಚುರುಕು ಮುಟ್ಟಿಸಲಿದ್ದಾರೆ.
ದೆಹಲಿಯಲ್ಲಿ ಇಂದು ನಡೆದ ಬಿಜೆಪಿ ನಾಯಕರ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮನವೊಲಿಸುವಲ್ಲಿ ನಾಯಕರು ಯಶಸ್ವಿಯಾಗಿದ್ದಾರೆ.
ಈ ಮೊದಲು ಪಾದಯಾತ್ರೆ ಪಾಲಿಟಿಕ್ಸ್‌ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಭಿನ್ನಮತ ಉಂಟಾಗಿತ್ತು. ಪಾದಯಾತ್ರೆಗೆ ಎಚ್.ಡಿ.ಕುಮಾರಸ್ವಾಮಿ ಒಪ್ಪಿಗೆ ಸೂಚಿಸಿರಲಿಲ್ಲ. ಈಗ ಪಾದಯಾತ್ರೆಗೆ ಎಚ್‌ಡಿಕೆ ಒಪ್ಪಿಗೆ ಸೂಚಿಸಿದ್ದು, ಜೆಡಿಎಸ್-ಬಿಜೆಪಿಯಿಂದ ಪಾದಯಾತ್ರೆ ಫಿಕ್ಸ್ ಆಗಿದೆ.
ಈ ಬಗ್ಗೆ ದೆಹಲಿಯಲ್ಲಿಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಉಸ್ತುವಾರಿ ರಾಧಾಮೋಹನ್ ದಾಸ್, ಬಿ.ವೈ.ವಿಜಯೇಂದ್ರ ಜಂಟಿ ಸುದ್ದಿಗೋಷ್ಠಿ ನಡೆಸಿ ಬೆಂಗಳೂರು ಟು ಮೈಸೂರು ಪಾದಯಾತ್ರೆ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಶನಿವಾರ ಬೆಂಗಳೂರಿನಿಂದ ಪಾದಯಾತ್ರೆ ಕೈಗೊಂಡಿದ್ದೇವೆ. ಈ ಪಾದಯಾತ್ರೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೇ ಚಾಲನೆ ನೀಡಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.