ಮೈಸೂರು: ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ, ಜೆಡಿಎಸ್‌ನ ಜನತಂತ್ರ ವಿರೋಧಿ ಸರ್ವಾಧಿಕಾರಿ ದುರಾಡಳಿತವನ್ನು ವಿರೋಧಿಸಿ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ (ಆ.9) ನಡೆದ ಬೃಹತ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದರು.
ನೀವೆಲ್ಲಾ ಪ್ರಜಾಪ್ರಭುತ್ವದ ಸೇನಾನಿಗಳು. ಸಂವಿಧಾನ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತ ನಾಡಿನ ಏಳುಕೋಟಿ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.
ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ. ಈಗ ನನ್ನನ್ನೂ ಸಹಿಸುತ್ತಿಲ್ಲ. ಜೆಡಿಎಸ್ ನ ದೇವೇಗೌಡರು ಮತ್ತು ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಳ್ಳುವವರಲ್ಲ. ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ ನನ್ನ ಶವದ ಮೇಲೆ ನಡೆಸಬೇಕು ಎಂದು ದೇವೇಗೌಡರು ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದ ದೇವೇಗೌಡರೇ ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ ನನಗೆ ಹಣ ಮಾಡುವ ಆಸೆ ಬಂದಿಲ್ಲ, ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಲ್ಲ. ಎರಡು ಬಾರಿ ಸಿಎಂ ಆದರೂ ಪ್ರಮಾಣ ವಚನಕ್ಕೂ ಬರಲಿಲ್ಲ. ನಾವು ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ. ನಿಮ್ಮ ನಂಬಿಕೆಗೆ ದ್ರೋಹ ಎಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ ಎಂದರು.