ಹಾಸನ: ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.
ಇಂದು ಮುಂಜಾನೆಯೇ ಬಾಳುಪೇಟೆ ಹಾಗೂ ಸಕಲೇಶಪುರ ಮಧ್ಯೆ ಭೂಕುಸಿತವಾಗಿದ್ದು, ಹಳಿ ಮೇಲೆ ರಾಶಿಗಟ್ಟಲೇ ಮಣ್ಣು ಬಿದ್ದಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್ ಮತ್ತು ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.
ಇನ್ನು ಗುಡ್ಡ ಕುಸಿತದಿಂದ ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರ ಸ್ಥಗಿತವಾಗಿದ್ದು, ಸಕಲೇಶಪುರ, ಯಡಕುಮಾರಿ, ಶಿರವಾಗಿಲು, ಆಲೂರು ಸೇರಿದಂತೆ ಆರು ಕಡೆ ಈಗ ರೈಲುಗಳು ನಿಂತಿವೆ. ಮಧ್ಯರಾತ್ರಿಯಿಂದ ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಸಾವಿರಾರು ಪ್ರಯಾಣಿಕರು ಪರದಾಟ ನಡೆಸಿದ್ದು, ಪರ್ಯಾಯ ವಾಹನ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಹಾಸನ ಭಾಗದಲ್ಲಿ ಮತ್ತೆ ಮತ್ತೆ ಗುಡ್ಡ ಕುಸಿತ ಉಂಟಾಗುತ್ತಿದ್ದು, ರೈಲ್ವೆ ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಜಿಲ್ಲಾಡಳಿತದ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.
ಈ ಹಿನ್ನೆಲೆಯಲ್ಲಿ ಅನಧಿಕೃತ ಹೋಂಸ್ಟೇಗಳಿಂದಲೇ ಈ ರೀತಿ ಗುಡ್ಡ ಕುಸಿತ ಉಂಟಾಗುತ್ತಿದೆ ಎಂದು ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಘಟನೆ ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.





