ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ ಮುಂದುವರಿದಿದ್ದು, ನಾಳೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದರ ಜೊತೆಗೆ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಕರಾವಳಿಯ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಹಾಗೂ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು ಬೆಳಿಗ್ಗೆ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ರಸ್ತೆಗಳಲ್ಲಿ ಮಳೆ ನೀರು ನದಿಯಂತೆ ಹರಿದಿದೆ. ಇದರಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ಹಲವು ಕಡೆ ಮನೆಗಳಿಗೆ ನೀರು ನುಗ್ಗಿದ ಘಟನೆ ನಡೆದಿದೆ.