Mysore
24
scattered clouds

Social Media

ಸೋಮವಾರ, 30 ಡಿಸೆಂಬರ್ 2024
Light
Dark

ಸಾಹಿತ್ಯ ಸಮ್ಮೇಳನವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಪ್ರಾರಂಭಿಸಿ : ಎನ್ ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20,21 ಹಾಗೂ 22 ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಪ್ರಾರಂಭಿಸಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.

ಅವರು ಗುರುವಾರ(ಆ.15) ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಸಾಹಿತ್ಯ ಸಮ್ಮೇಳನದ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಎಂದ ತಕ್ಷಣ ಎಲ್ಲರಿಗೂ ಮನಸ್ಸಿನಲ್ಲಿ ಸಂತೋಷ, ಮಂಡ್ಯ ಜಿಲ್ಲೆಯಲ್ಲಿ ಇದು ಮೂರನೇ ಬಾರಿ ಸಾಹಿತ್ಯ ಸಮ್ಮೇಳನದ ಆತಿಥ್ಯ ದೊರಕಿರುವುದು ಸಂತೋಷದ ವಿಷಯವಾಗಿದೆ ಎಂದರು.

ಇಂದು ಆಯೋಜಿಸಿರುವ ಸಭೆಯು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡುವ ಕಾರ್ಯಕ್ರಮವಾಗಿದೆ. ಸಮಿತಿಯಲ್ಲಿರುವ ಪ್ರತಿಯೊಬ್ಬರು ಯಾವುದೇ ಲೋಪ ಉಂಟಾಗದಂತೆ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿ. ಶಾಸಕರು ಹಾಗೂ ಇನ್ನಿತರ ಗಣ್ಯರನ್ನು ಸಮಿತಿಗಳ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬೇರೆ ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಗಳಿಂದ ಕನ್ನಡಾಭಿಮಾನಿಗಳನ್ನು‌ ಆಗಮಿಸುವಂತೆ ಸಮ್ಮೇಳನವನ್ನು ಸಜ್ಜುಗೊಳಿಸೋಣ, ಪ್ರತಿಯೊಬ್ಬರಿಗೂ ಆಹ್ವಾನ ನಿಡೋಣ ಎಂದು ಹೇಳಿದರು.

ಎಲ್ಲಾ ಸಮಿತಿಯು ಸಮನ್ವಯದಿಂದ ಕಾರ್ಯನಿರ್ವಹಿಸೋಣ ಯಾವುದೇ ಗೊಂದಲ ಇದ್ದರೆ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಿ. ಸಮ್ಮೇಳನವನ್ನು ಆಕರ್ಷಿತವಾಗಿ ಮಾಡಲು ಈಗಿನಿಂದಲೇ ಯೋಜನೆ ರೂಪಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಮಹೇಶ್ ಜೋಷಿ ಮಾತನಾಡಿ, ಸಾಹಿತ್ಯ ಸಮ್ಮೇಳನವನ್ನು ಅಚ್ಚುಕಟ್ಟಾಗಿ ಆಚರಿಸಲು 28 ಸಮಿತಿಯನ್ನು ರಚಿಸಲಾಗಿದೆ. ಎಲ್ಲರೂ ಸಂಘಟಿತರಾಗಿ ಕೆಲಸ ನಿರ್ವಹಿಸೋಣ, ರಾಜ್ಯಕ್ಕೆ ಕರ್ನಾಟಕ ಎಂದು ಹೆಸರು ನಾಮಕರಣವಾದ ನಂತರ ಮೊದಲ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜಿಲ್ಲೆಯಲ್ಲಿ ಆಚರಿಸಲಾಯಿತು. ಡಿಸೆಂಬರ್ ಮಾಹೆಯಲ್ಲಿ ಕ್ರಿಷಮಸ್ ರಜೆಯಿದ್ದು, ಹೆಚ್ಚಿನ ವಿದ್ಯಾರ್ಥಿಗಳು ಹಾಗೂ ಕನ್ನಡ ಆಸಕ್ತರನ್ನು ಸೇರಿಸುವ ಉದ್ದೇಶದಿಂದ ಡಿಸೆಂಬರ್ 20, 21 ಹಾಗೂ 22 ರಂದು ಆಚರಿಸಲಾಗುತ್ತಿದೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಸಮ್ಮೇಳನ ಜಿಲ್ಲಾಡಳಿತ, ಸರ್ಕಾರಕ್ಕೆ ಸೀಮಿತ ಮಾಡದೇ ಪ್ರತಿಯೊಬ್ಬರು ಸೇರಿ ಕೊಂಡು ಐತಿಹಾಸಿಕ ಹಬ್ಬವಾಗಿ ಆಚರಿಸಿ. ದಾಖಲೆ ಸೃಷ್ಠಿಸುವ ರೀತಿ ಸಾಹಿತ್ಯ ಸಮ್ಮೇಳನವನ್ನು ಎಲ್ಲರ ಮನಸ್ಸಿನಲ್ಲಿ ಸವಿ ನೆನಪಾಗಿ ಉಳಿಯುವ ರೀತಿ ಮಾಡೋಣ ಎಂದರು.

ಕನ್ನಡ ಸಾಹಿತ್ಯ ಸಮ್ಮೇಳನದ ಮಹಾಪೋಷಕರಾದ ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷರಾದ ಡಾ: ಶ್ರೀ ಶ್ರೀ ನಿರ್ಮಲನಂದನಾಥ ಸ್ವಾಮೀಜಿ ಮಾತನಾಡಿ, ಕನ್ನಡ ನಾಡು ನುಡಿ, ಭಾಷೆಯನ್ನು ಸಂಭ್ರಮಿಸುವ ಹಬ್ಬ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ. ಕನ್ನಡ ಭಾಷೆ ನಮ್ಮ ಸಂಸ್ಕೃತಿ, ಭೌತಿಕ, ಮಾನಸಿಕ ಶಕ್ತಿ ನೀಡುವ ನಮ್ಮ ಕನ್ನಡ ಭಾಷೆಯ ಹಬ್ಬವನ್ನು ಸಂಭ್ರಮಿಸೋಣ. ಪ್ರತಿಯೊಂದು ಕಲಿಕಾ ವಿಭಾಗ ಹಾಗೂ ಕ್ಷೇತ್ರದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದರು.

ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಡಿಂಡಿಮವನ್ನು ಬಾರಿಸಬೇಕು. ಇದಕ್ಕೆ ಕನ್ನಡದ ಬಗ್ಗೆ ಆಸಕ್ತಿ ಮೂಡಿಸಲು ಸತ್ತಂತಿಹರನ್ನು ಬಡಿದೆಚ್ಚರಿಸು; ಕಚ್ಚಾಡುವರನು ಕೂಡಿಸಿ ಒಲಿಸಿ ಸಮ್ಮೇಳನವನ್ನು ಉತ್ತಮವಾಗಿ ಆಚರಿಸೋಣ ಎಂದರು.

ಕಾರ್ಯಕ್ರಮದಲ್ಲಿ ವಿಧಾನಸಭಾ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಪಿ. ರವಿಕುಮಾರ್, ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ, ಮಧು ಜಿ ಮಾದೇಗೌಡ, ಮಾಜಿ ಶಾಸಕ ಅನ್ನದಾನಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಡಾ: ಹೆಚ್ ಎಲ್ ನಾಗರಾಜು, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ವಿವಿಧ ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸಂಚಾಲಕರು, ಸದಸ್ಯರು ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

Tags: