ಚಾಮರಾಜನಗರ: ಕಾರಿನಲ್ಲಿ ಆನೆ ದಂತ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಶಿವಮೂರ್ತಿ, ಶಿವಕುಮಾರ್ ಹಾಗೂ ಅಂತೋಣಿ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಆನೆಯ 2 ದಂತ ಹಾಗೂ ಒಂದು ಕಾರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಮೂವರು ಆರೋಪಿಗಳು ಹಣದ ಆಸೆಗೋಸ್ಕರ ಆನೆ ದಂತಗಳನ್ನು ಕಾರಿನಲ್ಲಿ ಸಾಗಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ದಂತಗಳ ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇನ್ನು ಈ ಭಾಗದಲ್ಲಿ ಬೇಟೆಗಾರರ ಹಾವಳಿ ಹೆಚ್ಚಾಗಿದ್ದು, ಇದನ್ನು ತಡೆಯಲು ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಷ್ಟೆಲ್ಲಾ ಪ್ರಕರಣಗಳು ಆದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಿನಲ್ಲಿ ಸೂಕ್ತ ಕಟ್ಟೆಚ್ಚರ ವಹಿಸಬೇಕು ಎಂದು ಪ್ರಾಣಿಪ್ರಿಯರು ಆಗ್ರಹಿಸಿದ್ದಾರೆ.