ಬೆಂಗಳೂರು: ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಸುಜ್ಜಲೂರು ಗ್ರಾಮದ ದಲಿತ ಸಮುದಾಯ ಬಡವಾಣೆಯಲ್ಲಿ ರಸ್ತೆ ಮತ್ತು ಚರಂಡಿಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾದ ಪರಿಣಾಮ ನೈರ್ಮಲ್ಯತೆ ಇಲ್ಲದಂತಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಪರಿಶೀಲನೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.
ಅದರಂತೆ, ತಹಶೀಲ್ದಾರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ತಾಂತ್ರಿಕ ಸಹಾಯಕ ಅಭಿಯಂತರರು ಮತ್ತು ಪಿಡಿಓರವರು ಮೈಸೂರು ಜಿಲ್ಲಾ ಪಂಚಾಯತ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ. ಸದರಿ ಜಾಗವು ಗ್ರಾಮದ ಕೊನೆಯ ಭಾಗವಾಗಿರುವುದರಿಂದ ಚರಂಡಿ ನೀರು ಹೊರಗಡೆ ಹೋಗಲು ಯಾವುದೇ ರೀತಿಯ ಸರ್ಕಾರಿ ಜಾಗದ ವ್ಯವಸ್ಥೆ ಇರುವುದಿಲ್ಲ. ಸದ್ಯ ಚರಂಡಿ ನೀರು ಮನೆಗಳಿಗೆ ನುಗ್ಗದಂತೆ ನೋಡಿಕೊಳ್ಳಲು ಇಂಗುಗುಂಡಿಗಳನ್ನು ನಿರ್ಮಾಣ ಮಾಡಿದ್ದು, ಹೆಚ್ಚುವರಿಯಾಗಿ ಮೋಟಾರ್ ವ್ಯವಸ್ಥೆಯನ್ನು ಮಾಡಲಾಗಿದೆ.
ಬಡಾವಣೆ ಜನರಿಗೆ ಶಾಶ್ವತ ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ, ಗೃಹ ತ್ಯಾಜ್ಯ ನೀರಿನ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಯಾವುದೇ ಸಾರ್ವಜನಿಕ ಸ್ಥಳ ಲಭ್ಯವಿಲ್ಲದೇ ಇರುವುದರಿಂದ ಖಾಸಗಿ ಜಮೀನನ್ನು ಭೂಸ್ವಾಧೀನ ಮಾಡಿಕೊಳ್ಳಲು ತಹಶೀಲ್ದಾರ್‌ರೊಂದಿಗೆ ಚರ್ಚಿಸಲಾಗಿದ್ದು, ಕಂದಾಯ ಇಲಾಖೆಗೆ ಮನವಿ ಸಲ್ಲಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ನಂತರ ನಿಯಮಾನುಸಾರ ಗೃಹ ತ್ಯಾಜ್ಯ ನೀರಿನ ನಿರ್ವಹಣೆ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಮೈಸೂರು ಜಿಲ್ಲಾ ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳೀಯವಾಗಿ ನೀವು ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಗಳ @osd_cmkarnataka `ಎಕ್ಸ್ʼ ಖಾತೆಗೆ ಟ್ಯಾಗ್ ಮಾಡಿ ಎಂದು ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.