Mysore
26
scattered clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಗೌರಿ ಗಣೇಶ ಹಬ್ಬ: ನಿಯಮ ಉಲ್ಲಂಘಿಸಿದ್ದಲ್ಲಿ ಕಾನೂನು ರೀತ್ಯಾ ಕ್ರಮ: ಮಲ್ಲಿಕಾರ್ಜುನ ಬಾಲದಂಡಿ

ಮಂಡ್ಯ: ಗೌರಿ ಗಣೇಶ ಹಬ್ಬ ಹಾಗೂ ಈದ್‌ ಮೀಲದ್‌ ಎರಡು ಹಬ್ಬಗಳು ಜೊತೆ ಜೊತೆಗೆ ಬಂದಿರುವುದರಿಂದ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ, ಗೊಂದಲಮಯ ವಾತಾವರಣ ಸೃಷ್ಟಿ ಮಾಡದಂತೆ ಎಚ್ಚರಿಕೆ ವಹಿಸಿ ಹಬ್ಬ ಆಚರಣೆ ಮಾಡಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯತ್‌ ಕಾವೇರಿ ಸಭಾಂಗಣದಲ್ಲಿ ನಡೆದ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆ ಸಂಬಂಧ ಸೌಹರ್ದತೆ ಸಭೆ ನಡೆಸಿ ಅವರು ಮಾತನಾಡಿದರು.

ಅನುಮತಿ ಇಲ್ಲದ ಕಡೆ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವಂತಿಲ್ಲ. ಮೆರವಣಿಗೆ ಹೋಗುವ ರೂಟ್ ಮ್ಯಾಪ್ ನ್ನು ಪೊಲೀಸ್ ಇಲಾಖೆಗೆ ಒದಗಿಸಬೇಕು. ಕೆಲವು ವಿವಾದಾತ್ಮಕ ಸ್ಥಳಗಳಿರುತ್ತವೆ, ಆ ಸ್ಥಳದಲ್ಲಿ ಗಣಪತಿ ಪ್ರತಿಷ್ಠಾಪಿಸುವ ಬದಲು ಬೇರೆ ಸ್ಥಳಗಳನ್ನು ಆಯ್ಕೆ ಮಾಡಿ ಎಂದರು.

ಮಂಟಪ ಹಾಕುವ ಸಮಯದಲ್ಲಿ ಸರಿಯಾದ ಜಾಗ ಆಯ್ಕೆ ಮಾಡಬೇಕು, ವಿಗ್ರಹವು 5 ಅಡಿಗಿಂತ ಹೆಚ್ಚಿದ್ದರೆ ಮೆರವಣಿಗೆ ಹೋಗುವ ಸಮಯದಲ್ಲಿ ಕರೆಂಟ್ ವೈರ್ ಗಳಿಗೆ ಮಾವಿನ ತೋರಣಗಳು ತಗುಲಿ ಕೆಲವೊಂದು ಕಡೆ ಅಹಿತಕರ ಘಟನೆಗಳು ಸಂಭವಿಸಬಹುದು. ಕತ್ತಲಲ್ಲಿ ಗಣಪತಿ ವಿಸರ್ಜನೆ ಮಾಡುವಾಗ ನೀರಿನಲ್ಲಿ ಮುಳುಗುವ ಅವಘಡ ಸಂಭವಿಸಬಹುದು ಬೆಳಕಿನ ವ್ಯವಸ್ಥೆ ಮಾಡಿಕೊಳ್ಳಿ ಎಂದರು.

ಗೌರಿ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿದ ನಂತರ ಸಾಮೂಹಿಕವಾಗಿ ಗುರುತಿಸಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ವಿಸರ್ಜಿಸಬೇಕು.

ನೈಸರ್ಗಿಕವಾಗಿ ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಟ್ಯಾಂಕ್‌ಗಳಲ್ಲಿ, ಕಲ್ಯಾಣಿಗಳ ಪಕ್ಕದಲ್ಲಿ ಹಸಿ ಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಲಾಗುವುದು ಅದರಂತೆ ಪರಿಸರ, ಜಲ ಮಾಲಿನ್ಯ ಮಾಡದೆ ಕಸವನ್ನು ವಾಹನದಲ್ಲಿ ಹಾಕಬೇಕು ಎಂದರು.

ಸಾರ್ವಜನಿಕವಾಗಿ ಇಡಲಾಗುವ ಗಣೇಶ ಮೂರ್ತಿಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೋಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸುವುದು. ಈ ಅನುಮತಿ ಪತ್ರಗಳಲ್ಲಿ ಲೈಸನ್ಸ್ ನೀಡುವ ಸಂದರ್ಭಗಳಲ್ಲಿ ಪ್ಲಾಸ್ಟಿಕ್ ಪ್ಲೆಕ್ಸ್ ಮತ್ತಿತರ ವಸ್ತುಗಳ ಬಳಕೆ ನಿಷೇಧಿಸುವುದು ಹಾಗೂ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯ ತನಕ ಧ್ವನಿವರ್ಧಕಗಳ ಬಳಕೆ ನಿಷೇಧಿಸಬೇಕು ಇಲ್ಲವಾದಲ್ಲಿ ಕ್ರಮ ಕೈಗೊಳ್ಳಬೇಕಾದಿತು ಎಂದು ಎಚ್ಚರಿಸಿದರು.

Tags: