Mysore
21
overcast clouds
Light
Dark

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರದಲ್ಲಿ ಮೇಲುಬ್ಬರ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಇನ್ನೆರಡು ದಿನ ಮಳೆಯ ಪ್ರಮಾಣ ಹೆಚ್ಚಾಗಲಿದೆ.

ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇನ್ನು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಮಳೆಯ ಜೊತೆಗೆ ಗಾಳಿಯ ವೇಗವೂ ಜಾಸ್ತಿಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಮತ್ತು ರಾಮನಗರ ಸುತ್ತಮುತ್ತ ಸಾಧಾರಣ ಮಳೆಯಾಗಲಿದೆ.

ಇನ್ನು ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಧಾರಾಕಾರ ಮಳೆಯಾಗಲಿದೆ.

ಇನ್ನು ನಾಳೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.