ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮವಾಗಿದ್ದು, ಪ್ರಾಧಿಕಾರ ರಚನೆ ವಿರೋಧಿಸಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನಡೆ ಖಂಡಿಸಿ ಮಾತನಾಡಿದ ಯದುವೀರ್ ಒಡೆಯರ್ ಅವರು, ಪ್ರಾಧಿಕಾರದ ಸಭೆಗೆ ಕೋರ್ಟ್ ತಡೆಯಾಜ್ಞೆ ಕೊಟ್ಟಿದ್ದರೂ ಸಭೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಿದಂತಾಗಿದೆ. ಸೆಪ್ಟೆಂಬರ್.5ರವರೆಗೂ ಕೋರ್ಟ್ ತಡೆಯಾಜ್ಞೆ ನೀಡಿದೆ. ಯಥಾಸ್ಥಿತಿ ಮುಂದುವರಿಸಿಕೊಂಡು ಹೋಗಲು ಸೂಚನೆ ನೀಡಿದೆ ಎಂದರು.
ಪ್ರಾಧಿಕಾರದ ರಚನೆಯಿಂದ ನಮ್ಮ ಮೂಲ ಧಾರ್ಮಿಕ ನಂಬಿಕೆ ಹಕ್ಕುಗಳಿಗೆ ಧಕ್ಕೆ ಉಂಟಾಗುತ್ತದೆ. ನಾವು ಧಾರ್ಮಿಕ ಹಕ್ಕುಗಳನ್ನು ಯಾರಿಗೂ ಕೊಟ್ಟಿಲ್ಲ. ಈ ಹಿನ್ನೆಲೆಯಲ್ಲಿ ಅದರ ಬಗ್ಗೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದರು.
ಇನ್ನು ದೇವಾಲಯದ ಹುಂಡಿ ಹಣ ದೇವಾಲಯಗಳಿಗೆ ಬಳಕೆ ಆಗಬೇಕು ಎಂದು ಹೇಳಿದರು.