Mysore
22
clear sky

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಮೈಸೂರು: ಜಿಲ್ಲೆಯಾದ್ಯಂತ ಸೆ.17 ರಿಂದ ಅ. 2 ರವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮ

ಮೈಸೂರು : ಸ್ವಚ್ಛ ಭಾರತ ಅಭಿಯಾನ 10ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಈ ಯೋಜನೆಯ ಸಾಧನೆಯ ಮೈಲಿಗಲ್ಲನ್ನು ಗೌರವಿಸಲು ಜಿಲ್ಲೆಯಾದ್ಯಂತ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಆಯೋಜಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಕೆ.ಎಂ ಗಾಯಿತ್ರಿ ತಿಳಿಸಿದರು.

ಅವರು ಬುಧವಾರ ಜಿಲ್ಲಾ ಪಂಚಾಯತ್ ನ ಮಿನಿ ಸಭಾಂಗಣದಲ್ಲಿ ಮಾತನಾಡಿ, ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಅವಧಿಯಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಪರಿಣಾಮಕಾರಿಯಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಳ್ಳಿಗಳಲ್ಲಿ ಸ್ವಚ್ಛತೆ ಕಾಪಾಡಲು ಶ್ರಮದಾನ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದರ ಮೂಲಕ ಗ್ರಾಮದ ಪ್ರಮುಖ ಬೀದಿ, ಶಾಲಾ ಆವರಣ, ಆಟದ ಮೈದಾನ, ಜಲಮೂಲಗಳು, ಧಾರ್ಮಿಕ ಕೇಂದ್ರಗಳ ಸಮೀಪ ಸ್ವಚ್ಛತಾ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಗ್ರಾಮದ ಅತ್ಯಂತ ಹೆಚ್ಚು ತ್ಯಾಜ್ಯ ಸಂಗ್ರಹವಾಗುವ ಪ್ರದೇಶ ಮತ್ತು ಅಧಿಕ ಅನೈರ್ಮಲ್ಯ ಇರುವ ಸ್ಥಳಗಳನ್ನು ಗುರತಿಸಿ ಶ್ರಮದಾನ ಮಾಡುವ ಮೂಲಕ ಸಂಪೂರ್ಣ ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಶೌಚಾಲಯ ಬಳಕೆ ಕುರಿತು ಪ್ರಭಾತ್ ಪೇರಿ ಚಟುವಟಿಕೆ, ಸಫಾಯಿ ಮಿತ್ರ ಸುರಕ್ಷಾ ಶಿಬಿರ, ಶಾಲಾ ಮಕ್ಕಳಲ್ಲಿ ಸ್ಲೋಗನ್ ಬರೆಯುವ ಸ್ಪರ್ಧೆ, ಸ್ವಚ್ಛತಾ ಕಾರ್ಮಿಕರಿಗೆ ಸನ್ಮಾನ ಮತ್ತು ಓಡಿಎಪ್ ಪ್ಲಸ್ ಸುಸ್ಥಿರತೆ ಅಂಶಗಳ ಕುರಿತು ಗ್ರಾಮ ಪಂಚಾಯಿತಿ ಅಧ್ಯಕ್ಷರೊಂದಿಗೆ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಹಾಗೂ ವಿಶೇಷ ಗ್ರಾಮ ಸಭೆಗಳನ್ನು ಆಯೋಜಿಸಿ ಸ್ವಚ್ಛತಾ ಪ್ರತಿಜ್ಞಾ ವಿಧಿ ಬೋಧಿಸಬೇಕು ಎಂದರು.

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಾಲಯಗಳನ್ನು ಗುರುತಿಸಿ ಸ್ವಚ್ಛತಾ ಅಭಿಯಾನ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ಉತ್ಪತ್ತಿಯಾಗುವ ಕಸವನ್ನು ಸಂಪನ್ಮೂಲವನ್ನಾಗಿ ಪರಿವರ್ತಿಸುವ ಕುರಿತಂತೆ ಸ್ವ ಸಹಾಯ ಸಂಘದ ಸದಸ್ಯರಿಗೆ ಅರಿವು ಮೂಡಿಸುವ ಚುವಟಿಕೆಗಳನ್ನು ಕೈಗೊಳ್ಳಬೇಕು, ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಸ್ವಚ್ಛತಾ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಬೇಕು ಹಾಗೂ ವಿವಿಧ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳ ಕುರಿತಂತೆ ಅವರಿಗೆ ಮಾಹಿತಿ ನೀಡಬೇಕು ಎಂದರು.

ಜಿಲ್ಲೆಯಲ್ಲಿ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಅತ್ಯಂತ ಪರಿಣಾಮಕಾರಿಯಾಗಿ ಆಚರಿಸಲು, ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ (ಅಭಿವೃದ್ಧಿ) ಕೃಷ್ಣರಾಜು, ಮುಖ್ಯ ಲೆಕ್ಕಾಧಿಕಾರಿಗಳು, ಸಿದ್ದಗಂಗಮ್ಮ, ಯೋಜನಾ ಅಧಿಕಾರಿಗಳು, ಪ್ರಭುಸ್ವಾಮಿ, ಉಪಕಾರ್ಯದರ್ಶಿ (ಆಡಳಿತ) ಸವಿತ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags: