ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆಯ ವೇಳೆ ನಡೆದಿರುವ ಗಲಭೆಯು ಕೆಲ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಸಮಾಜದ ನೆಮ್ಮದಿಗೆ ಭಂಗವನ್ನುಂಟು ಮಾಡುವ ಸಲುವಾಗಿಯೇ ಅವರು ಇಂತಹ ಕೃತ್ಯವೆಸಗಿದ್ದಾರೆ.
ಕೋಮು ಸೌಹಾರ್ದಕ್ಕೆ ಹೆಸರಾಗಿದ್ದ ಮಂಡ್ಯ ಜಿಲ್ಲೆಯಲ್ಲಿ ಇಂತಹ ಗಲಭೆಗಳು ಆಗಾಗ್ಗೆ ನಡೆಯುತ್ತಿರುವುದು ದುರದೃಷ್ಟಕರ. ಸರ್ಕಾರ ಇಂತಹ ಕೃತ್ಯಗಳಿಗೆ ಶೀಘ್ರ ಕಡಿವಾಣ ಹಾಕಬೇಕು. ಕೋಮುಗಲಭೆ ಸೃಷ್ಟಿಸುವವರು ಯಾವುದೇ ಜಾತಿಯವರಾಗಿರಲಿ, ಯಾವುದೇ ಧರ್ಮದವರಾಗಿರಲಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದು ಸರ್ಕಾರದ ಕರ್ತವ್ಯ. ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಸಂದೇಶ ಗಳನ್ನು ರವಾನಿಸಿ ಗಲಭೆ ಸೃಷ್ಟಿಸುವವರ ವಿರುದ್ಧವೂ ಕ್ರಮಕೈಗೊಳ್ಳಬೇಕಾಗಿದೆ. ಇನ್ನು ನಾಗಮಂಗಲದಲ್ಲಿ ನಡೆದ ಈ ಗಲಭೆಯಲ್ಲಿ ಎರಡೂ ಕೋಮುಗಳ ಅಮಾಯಕರ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟವಾಗಿದೆ. ಆದ್ದರಿಂದ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಕೋಮುಗಲಭೆ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವ ಜತೆಗೆ ನಷ್ಟ ಅನುಭವಿಸಿದವರಿಗೆ ಪರಿಹಾರಿ ನೀಡಿ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.





