ಬೆಂಗಳೂರು: ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಗೆ ಮುಂದಿನ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವಂತೆ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಮುನಿರತ್ನಗೆ ಅಕ್ಟೋಬರ್ 19ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ.
ಸಂತ್ರಸ್ಥ ಮಹಿಳೆಯ ದೂರಿನ ಆಧಾರದ ಮೇಲೆ ಶಾಸಕ ಮುನಿರತ್ನ ಮೇಲೆ ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ಎಸ್ಐಟಿ ತನಿಖಾ ಕಸ್ಟಡಿಗೆ ವಹಿಸಿದ್ದು, ಇಂದು ಎಸ್‌ಐಟಿ ಕಸ್ಟಡಿ ಅಂತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಮುನಿರತ್ನ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಬಳಿಕ ಎಸ್‌ಐಟಿ ಅಧಿಕಾರಿಗಳು ಕಸ್ಟಡಿಗೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಆದರೆ ಇದೀಗ ಕೋರ್ಟ್ ಮುಂದಿನ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿಡುವಂತೆ ಆದೇಶ ನೀಡಿದೆ.
ಇದೇ ಸಂದರ್ಭದಲ್ಲಿ ಕೋರ್ಟ್‌ನಲ್ಲಿ ಮುನಿರತ್ನ ಪರ ವಕೀಲರು ಮನೆ ಊಟಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಕೋರ್ಟ್ ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಮನವಿ ಮಾಡಲು ಸೂಚಿಸಿದ್ದು, ಒಂದು ವೇಳೆ ಜೈಲು ಅಧಿಕಾರಿಗಳು ಒಪ್ಪದೇ ಇದ್ದ ಸನ್ನಿವೇಶದಲ್ಲಿ ನ್ಯಾಯಾಲಯಕ್ಕೆ ಅರ್ಜಿ ಹಾಕುವಂತೆ ಸಲಹೆ ನೀಡಿದೆ.