ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದೆ.
2024ನೇ ವರ್ಷದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಜಂಬೂಸವಾರಿ ಮೆರವಣಿಗೆ ನಡೆಯಲಿದೆ.
ಮೊದಲಿಗೆ ನಂದಿಧ್ವಜ ಪೂಜೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಅವರು, ನಂದಿಧ್ವಜ ಪೂಜೆ ನೆರವೇರಿಸಲಿದ್ದಾರೆ.
ಬಳಿಕ ಸಿಎಂ ಸಿದ್ದರಾಮಯ್ಯ ಅವರು ವಿಜಯದಶಮಿ ಮೆರವಣಿಗೆ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಸಿ.ಮಹದೇವಪ್ಪ ಸೇರಿದಂತೆ ಹಲವು ಶಾಸಕರು ಹಾಗೂ ಸಚಿವರು ಉಪಸ್ಥಿತರಿರಲಿದ್ದಾರೆ.
ಅರಮನೆ ಒಳಾವರಣದಲ್ಲಿ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ಕ್ಯಾಪ್ಟನ್ ಅಭಿಮನ್ಯು ಚಿನ್ನದ ಅಂಬಾರಿಯನ್ನು ಹೊತ್ತು ರಾಜಬೀದಿಯಲ್ಲಿ ಗಜಗಾಂಭೀರ್ಯದ ನಡಿಗೆ ಹಾಕಲಿದ್ದು, ಬನ್ನಿಮಂಟಪ ತಲುಪಲಿದ್ದಾನೆ.
ಬಳಿಕ ಇಂದು ಸಂಜೆಯ ವೇಳೆಗೆ ಬನ್ನಿಮಂಟಪದ ಮೈದಾನದಲ್ಲಿ ಪಂಜಿನ ಕವಾಯತು ನಡೆಯಲಿದ್ದು, ಅದನ್ನು ನೋಡಲು ಲಕ್ಷಾಂತರ ಜನ ಸೇರಲಿದ್ದಾರೆ.