ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.
ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸಲು ಭಾರೀ ಉತ್ಸಾಹದಲ್ಲಿದ್ದ ಸಿ.ಪಿ.ಯೋಗೇಶ್ವರ್ ಅವರಿಗೆ ಬಿಜೆಪಿಯಿಂದ ಟಿಕೆಟ್ ಮಿಸ್ ಆಗಿದೆ. ಈ ಹಿನ್ನೆಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಯಲು ಯೋಗೇಶ್ವರ್ ನಿರ್ಧಾರ ಮಾಡಿದ್ದಾರೆ.
ಪರಿಣಾಮ ಯೋಗೇಶ್ವರ್ ಅವರು, ವಿಧಾನಪರಿಷತ್ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಲಿದ್ದು, ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಜೆಡಿಎಸ್ ಚಿಹ್ನೆಯಿಂದ ಚುನಾವಣೆಗೆ ಸ್ಪರ್ಧಿಸಲು ಹೇಳಿದ್ದರು. ಇದನ್ನು ನಾನು ತಿರಸ್ಕರಿಸಿದ್ದೇನೆ. ಕೊನೆ ಕ್ಷಣದವರೆಗೂ ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದೆ. ಆದರೆ, ನನಗೆ ಬಿಜೆಪಿ ಕಡೆಯಿಂದ ಯಾವುದೇ ಶುಭ ಸುದ್ದಿ ದೊರೆತಿಲ್ಲ. ಹೀಗಾಗಿ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅವರೇ ಸ್ಪರ್ಧೆ ಮಾಡುತ್ತಾರೆ ಎಂಬ ಮಾಹಿತಿ ಬಂದಿದೆ. ಹೀಗಾಗಿ ಜೆಡಿಎಸ್‌ನಿಂದ ನಿಖಿಲ್ ಸ್ಪರ್ಧಿಸುತ್ತಾರೆ ಅಂದ ಮೇಲೆ ಇನ್ನೇನಿದೆ. ಅದಕ್ಕಾಗಿ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದರು.