ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿಯ ಬಾಗಿಲನ್ನು ಇಂದು ತೆರೆಯಲಾಗಿದೆ.
ಇಂದು ಮಂಗಳವಾದ್ಯಗಳೊಂದಿಗೆ ಪೂಜಾ ಸಾಮಗ್ರಿಗಳ ಜೊತೆ ಪ್ರಧಾನ ಅರ್ಚಕ ನಾಗರಾಜ್ ನೇತೃತ್ವದಲ್ಲಿ ಬಾಗಿಲನ್ನು ತೆರೆಯಲಾಯಿತು. ಗರ್ಭಗುಡಿ ಬಾಗಿಲು ತೆರೆಯುವ ಮೊದಲು ಬಾಗಿಲಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲನ್ನು ಮಧ್ಯಾಹ್ನ 12.10ಕ್ಕೆ ತೆರೆಯಲಾಯಿತು. ಅರಸು ವಂಶಸ್ಥ ನಂಜರಾಜೇ ಅರಸ್ ಅವರು ಗೊನೆ ಇರುವ ಬಾಳೆಗೊನೆ ಕಡಿದ ಬಳಿಕ ಗರ್ಭಗುಡಿಯ ಬಾಗಿಲನ್ನು ತೆರೆಯಲಾಯಿತು.
ಅಲ್ಲಿ ಕಳೆದ ವರ್ಷ ಗರ್ಭಗುಡಿ ಮುಚ್ಚುವ ವೇಳೆ ಹಚ್ಚಿದ್ದ ದೀಪ ಉರಿಯುತ್ತಿತ್ತು. ಇನ್ನು ದೇವರಿಗೆ ಇಟ್ಟಿದ್ದ ಹೂವು ಕೂಡ ಬಾಡಿರಲಿಲ್ಲ. ಹಾಗೆಯೇ ದೇವರಿಗೆ ಇಟ್ಟಿದ್ದ ನೈವೇದ್ಯ ಕೂಡ ಹಳಸಿರಲಿಲ್ಲ.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಸಂಸದ ಶ್ರೇಯಸ್ ಪಟೇಲ್, ಶಾಸಕರಾದ ಸ್ವರೂಪ್ ಪಟೇಲ್, ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಸತ್ಯಭಾಮಾ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಬಾರಿ ದಿನದ 24 ಗಂಟೆಯೂ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರ ದರ್ಶನಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ.
ನವೆಂಬರ್.3ರವರೆಗೂ ಹಾಸನಾಂಬ ಜಾತ್ರಾ ಮಹೋತ್ಸವ ಜರುಗಲಿದ್ದು, ಇಂದು ಹಾಗೂ ಕೊನೆಯ ದಿನ ದೇವಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಉಳಿದ 9 ದಿನಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.