ನಾಗಮಂಗಲ(ಮಂಡ್ಯ ಜಿಲ್ಲೆ): ತಾಲೂಕಿನ ಬಿ.ಜಿ ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ನಾಳೆ ಅಂದರೆ ಅ.25ರಂದು ಆಯೋಜಿಸಿರುವ ಸಂವಾದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭಾಗವಹಿಸಲಿದ್ದಾರೆ.
ಆದಿಚುಂಚನಗಿರಿ ವಿ.ವಿಯ ವೈದ್ಯಕೀಯ ಮಹಾವಿದ್ಯಾಲಯದ ಬಿ.ಜಿ.ಎಸ್ ಸಭಾಂಗಣದಲ್ಲಿ ಮಧ್ಯಾಹ್ನ 2ಗಂಟೆಗೆ ಸಂವಾದ ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಪ್ರವೇಶ ಕಾರ್ಯಕ್ರಮ ಆಯೋಜಿಸಲಾಗಿದೆ.
ಸಂವಾದಕ್ಕೆ ಉಪ ರಾಷ್ಟ್ರಪತಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸುವರು. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ, ಗುಜರಾತ್‌ನ ರಾಜ್‌ಕೋಟ್‌ನ ಹರ್ಷ ವಿದ್ಯಾಮಂದಿರದ ಪರಮಾತ್ಮನಂದ ಸರಸ್ವತಿ ಜೀ, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಕೃಚಿ ಸಚಿವ ಎನ್.ಚಲುವರಾಯಸ್ವಾಮಿ, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಬಿ.ಎಲ್ ಸುಜಾತ ರಾಥೋಡ್ ಭಾಗವಹಿಸಲಿದ್ದಾರೆ.
ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸ್ಥಳ ಪರಿಶೀಲನೆ
ಜಿಲ್ಲೆಗೆ ಉಪ ರಾಷ್ಟ್ರಪತಿ ಆಗಮಿಸುತ್ತಿರುವ ಹಿನ್ನೆಲೆ ಆದಿಚುಂಚನಗಿರಿಯಲ್ಲಿ ಜಿಲ್ಲಾಧಿಕಾರಿ ಡಾ: ಕುಮಾರ ಪೂರ್ವಭಾವಿ ಸಭೆ ಮತ್ತು ಸ್ಥಳ ಪರಿಶೀಲನೆ ನಡೆಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು