ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಠಾಣೆ ಪೊಲೀಸರು, 1300 ಪುಟಗಳ ಹೆಚ್ಚುವರಿ ಚಾರ್ಜ್‌ಶೀಟ್‌ನ್ನು 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.
ಪ್ರಮುಖವಾಗಿ ಎಫ್‌ಎಸ್‌ಎಲ್ ವರದಿ, ಸಾಕ್ಷ್ಯಗಳ ಹೇಳಿಕೆಗಳು, ಆರೋಪಿ ಪುನೀತ್ ಮೊಬೈಲ್‌ನಿಂದ ರಿಟ್ರೀವ್ ಮಾಡಲಾದ 8 ಫೋಟೋಗಳು ಸೇರಿದಂತೆ ಮಹತ್ವದ ಅಂಶಗಳನ್ನು ಒಳಗೊಂಡಿರುವ ಹೆಚ್ಚುವರಿ ಚಾರ್ಜ್‌ಶೀಟ್ ಈಗ ಸಲ್ಲಿಕೆಯಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದು, ಅಗತ್ಯ ಚಿಕಿತ್ಸೆ ಪಡೆಯಲು ಜಾಮೀನು ಮಂಜೂರು ಮಾಡಬೇಕು ಎಂದು ನಟ ದರ್ಶನ್ ಕೋರಿದ್ದರು. ಬಳಿಕ ಆರೋಗ್ಯ ತಪಾಸಣೆಗಾಗಿ ಹೈಕೋರ್ಟ್ 6 ವಾರಗಳ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇದರ ನಡುವೆ ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ.
ಈ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮತ್ತೆ ಜೈಲಿಗೆ ಹೋಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ ಎನ್ನಲಾಗಿದೆ.