ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟದ ಹೊಸ ಸರ್ಕಾರ ಡಿಸೆಂಬರ್.5ರಂದು ರಚನೆಯಾಗುವ ಸಾಧ್ಯತೆಯಿದೆ.
ಈ ಬಗ್ಗೆ ಇಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿಕೆ ನೀಡಿದ್ದು, ದೇವೇಂದ್ರ ಫಡ್ನವೀಸ್ ಅವರು ಮತ್ತೆ ಸಿಎಂ ಆಗಲಿದ್ದಾರೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿಯ ಮಹಾಯುತಿ ಮೈತ್ರಿಕೂಟ 288 ವಿಧಾನಸಭಾ ಸ್ಥಾನಗಳಲ್ಲಿ 230 ಸ್ಥಾನಗಳನ್ನು ಗಳಿಸಿದೆ. ಈ ಮೂಲಕ ಮತ್ತೆ ಅಧಿಕಾರಕ್ಕೇರುತ್ತಿದೆ.
ಬಿಜೆಪಿ 132 ಸ್ಥಾನಗಳನ್ನು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಶಿವಸೇನೆ 57 ಮತ್ತು ಎನ್‌ಸಿಪಿ 41 ಸ್ಥಾನಗಳೊಂದಿಗೆ ನಂತರದ ಸ್ಥಾನದಲ್ಲಿದೆ.
ಡಿಸೆಂಬರ್.5ರಂದು ಹೊಸ ಸರ್ಕಾರದ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಎಂದು ಬಿಜೆಪಿ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆ.
ಬಿಜೆಪಿಯ ಹಿರಿಯ ನಾಯಕ ದೇವೇಂದ್ರ ಫಡ್ನವೀಸ್ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಎಲ್ಲಾ ಲಕ್ಷಣಗಳು ಕಂಡುಬಂದಿದೆ.
ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ಸಿಎಂ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ತಿಳಿದುಬಂದಿದೆ.
ಇನ್ನು ಡಿಸೆಂಬರ್.2ರಂದು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಭೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.