Mysore
30
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಎಲ್ಲರಲ್ಲೂ ಸಾಹಿತ್ಯ ಪ್ರಜ್ಞೆ ಬೆಳೆಸುವುದು ಸಮ್ಮೇಳನದ ಧ್ಯೇಯ : ಮೀರಾಶಿವಲಿಂಗಯ್ಯ

ಮಂಡ್ಯ: ಪ್ರತಿಯೊಬ್ಬರಲ್ಲಿಯೂ ಕನ್ನಡ ಸಾಹಿತ್ಯ ಪ್ರಜ್ಞೆ ಬೆಳಯಬೇಕು ಎಂಬುದು ಸಾಹಿತ್ಯ ಸಮ್ಮೇಳನದ ಉದ್ದೇಶವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ ಸಂಚಾಲಕಿ ಡಾ. ಮೀರಾಶಿವಲಿಂಗಯ್ಯ  ತಿಳಿಸಿದರು.

ಅವರು ಇಂದು(ಡಿ.12) ಸರ್ಕಾರಿ ಪದವಿ ಪೂರ್ವ ಕಾಲೇಜು ಕಲ್ಲುಕಟ್ಟಡದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಪ್ರಚಾರ ಸಮಿತಿ ವತಿಯಿಂದ ಇಡೀ ಜಿಲ್ಲೆಯಾದ್ಯಂತ ಕಾಲೇಜು ವಿದ್ಯಾರ್ಥಿಗಳಿಗೆ ಏಕ ಕಾಲದಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿ, ಸಾಹಿತ್ಯ ಮತ್ತು ವಿಶೇಷವಾಗಿ ಮಂಡ್ಯ ಜಿಲ್ಲಾ ಸಾಹಿತ್ಯ ಇತಿಹಾಸ ವೈಶಿಷ್ಟ್ಯಗಳ ಕುರಿತ ಹಮ್ಮಿಕೊಳ್ಳಲಾಗಿರುವ ರಸಪ್ರಶ್ನೆ ಸ್ಪರ್ಧಾ ಪರೀಕ್ಷೆಗೆ ಪ್ರಶ್ನೆಪತ್ರಿಕೆಯನ್ನು ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯಾದ್ಯಂತ ಪದವಿ ಪೂರ್ವ ಕಾಲೇಜಿನ ಮಕ್ಕಳಿಗೆ ರಸಪ್ರಶ್ನೆ ಸ್ಪರ್ಧಾ ಪರೀಕ್ಷೆಯು ಏಕಕಾಲದಲ್ಲಿ ನಡೆಯುತ್ತಿದ್ದು,  ಜಿಲ್ಲೆಯಲ್ಲಿ 157 ಪದವಿ ಪೂರ್ವ ಕಾಲೇಜಿಗಳಿಂದ ಸುಮಾರು 28,000 ಮಕ್ಕಳು ಈ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಕಾಲೇಜು, ತಾಲೂಕು ಮತ್ತು ಜಿಲ್ಲಾ ಹಂತದಲ್ಲಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಲ್ಲಿ ಆಯ್ಕೆಗೊಂಡ ವಿಜೇತ ಮಕ್ಕಳಿಗೆ ಸಾಹಿತ್ಯ ಸಮ್ಮೇಳನ ಪ್ರಧಾನ ವೇದಿಕೆಯಲ್ಲಿ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಲಾಗುತ್ತದೆ ಎಂದು ಹೇಳಿದರು.

1974 ರಲ್ಲಿ ಮಂಡ್ಯದಲ್ಲಿ ಮೊದಲ ಬಾರಿಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ನಡೆಯಿತು.  ಬಳಿಕ  1994ರಲ್ಲಿ ನಡೆದಿತ್ತು. ಇದೀಗ 3ನೇ ಬಾರಿಗೆ 30 ವರ್ಷಗಳ ನಂತರ ನಡೆಯುತ್ತಿರುವುದು ಒಂದು ರೀತಿಯ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಕನ್ನಡ ಸಾಹಿತ್ಯಕ್ಕೆ ಸಂಬಂಧಿಸಿದ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸುವ ಉದ್ದೇಶವೆಂದರೆ ಕನ್ನಡ ಪ್ರಜ್ಞೆ, ಕನ್ನಡ ಪ್ರೇಮ ಬರಲಿ ಎಂದು ಹಾಗೂ ಕನ್ನಡ ಅಭಿಮಾನದ ಭಾವ ಮೂಡಲಿ ಎಂಬುದಾಗಿದೆ ಎಂದರು.

ಕನ್ನಡ ಶಾಸ್ತ್ರೀಯ ಭಾಷೆಯಾಗಿದ್ದು, ಕನ್ನಡ ಭಾಷೆಗೆ 2000 ವರ್ಷಕ್ಕೂ ಹೆಚ್ಚಿನ ಇತಿಹಾಸವಿದೆ. 3 ಪರಿಪೂರ್ಣ ಭಾಷೆಗಳಲ್ಲಿ ಕನ್ನಡವು ಸಹ ಒಂದಾಗಿದೆ. ಪ್ರತಿಯೊಬ್ಬರೂ ತಮ್ಮ ಕುಟುಂಬದ ಜೊತೆ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವುದರ ಜೊತೆಗೆ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ರಾಘವೇಂದ್ರ ಮಾತನಾಡಿ, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವುದು ಬಹಳ ಸಂತೋಷದ ವಿಷಯ.  ಕನ್ನಡ ಭಾಷೆಯನ್ನು ನಶಿಸಿ ಹೋಗಲಿಕ್ಕೆ ಬಿಡದೆ ಕನ್ನಡವನ್ನು ಅಗಾಧವಾಗಿ ಬೆಳೆಸಿ ಉಳಿಸಿಕೊಳ್ಳಬೇಕು ಎಂದು ತಿಳಿಸಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜು ಕಲ್ಲುಕಟ್ಟಡದ ಪ್ರಾಂಶುಪಾಲ ತಮ್ಮೇಗೌಡ ಮಾತನಾಡಿ, ಜಿಲ್ಲೆಯಲ್ಲಿ ಅತ್ಯಂತ ವೈಭವದಿಂದ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲಾ ವಿದ್ಯಾರ್ಥಿಗಳು ಕೂಡ ಪೋಷಕರೊಂದಿಗೆ  ಪಾಲ್ಗೊಂಡು ಸಹಕಾರ ನೀಡಬೇಕು ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಗೌರವ ಕಾರ್ಯದರ್ಶಿ ಡಾ ಹುಸ್ಕೂರು ಕೃಷ್ಣೆಗೌಡ ಮಾತನಾಡಿ, ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಡೀ ರಾಜ್ಯದಿಂದ ಕನ್ನಡಿಗರು ಆಗಮಿಸಲಿದ್ದು, ಕಾರ್ಯಕ್ರಮದಲ್ಲಿ ಕನ್ನಡ ಸಂಸ್ಕೃತಿಯನ್ನು ಮೆರೆಯಲಾಗುತ್ತದೆ. ಸಮ್ಮೇಳನದಲ್ಲಿ ಕನ್ನಡ ಕವಿಗಳು, ವಿಶೇಷ ಲೇಖನಗಳು, ವಿಚಾರ ಗೋಷ್ಠಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳ ಲಾಭವನ್ನು ಪಡೆದುಕೊಳ್ಳಲು ಎಲ್ಲರೂ ಸಮ್ಮೇಳನದಲ್ಲಿ ಭಾಗವಹಿಸಿ ಎಂದರು.

ಕಾರ್ಯಕ್ರಮದಲ್ಲಿ ಪ್ರಶ್ನೆ ಪತ್ರಿಕೆ ತಯಾರಕರಾದ ಮಹೇಶ್, ಶಿವರಾಮು, ಕ.ಸಾಪ. ಕೋಶಾಧ್ಯಕ್ಷರು ಅಪ್ಪಾಜಪ್ಪ, ತಾಲ್ಲೂಕು ಅಧ್ಯಕ್ಷ ಚಂದ್ರಲಿಂಗು, ರಂಗಸ್ವಾಮಿ, ಪ್ರಚಾರ ಸಮಿತಿಯ ಸದಸ್ಯ ಕಬ್ಬನಹಳ್ಳಿ ಶಂಭು, ಈವೆಂಟ್ಸ್ ಅಧ್ಯಕ್ಷ ಸಬ್ಬನಹಳ್ಳಿ ಶಶಿಧರ್, ಧನಂಜಯ ದಾಸರಗುಪ್ಪೆ, ಹೊಳಲು ಶ್ರೀಧರ್, ಎಂ ಮಂಚಶೆಟ್ಟಿ, ಉಪನ್ಯಾಸಕ ಹುಚ್ಚೇಗೌಡ, ಚಿಕ್ಕತಿಮ್ಮಯ್ಯ, ಕಿರಣ ಉಪಸ್ಥಿತರಿದ್ದರು.

Tags: