ಮಂಡ್ಯ: ಪಾರ್ಸೆಲ್ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಮೇಶ್ ಎಂಬುವವರೇ ಕೊಲೆಯಾದ ದುರ್ದೈವಿಯಾಗಿದ್ದು, ರಮೇಶ್ ತಾಯಿ ಯಶೋಧಮ್ಮ ಎಂಬುವವರ ಮೇಲೂ ಬರ್ಬರವಾಗಿ ಹಲ್ಲೆ ಮಾಡಿದ್ದಾನೆ. ಪಾರ್ಸೆಲ್ ಕೊಡುವ ಸೋಗಿನಲ್ಲಿ ಬಂದ ಅನಾಮಧೇಯ ವ್ಯಕ್ತಿಯೊಬ್ಬನಿಂದ ಈ ಕೃತ್ಯ ನಡೆದಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು, ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯ ದುಷ್ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕೃತ್ಯ ನಡೆಯುತ್ತಿದ್ದಂತೆ ಎಚ್ಚೆತ್ತ ಯಶೋಧಮ್ಮ ಮನೆಯಲ್ಲೇ ಆರೋಪಿಯನ್ನು ಲಾಕ್ ಮಾಡಿ ಅಕ್ಕಪಕ್ಕದವರನ್ನು ಕೂಗಿ ಕರೆದಿದ್ದಾರೆ. ಈ ವೇಳೆ ಮನೆಗೆ ಬಂದ ಜನರು ಆರೋಪಿಯನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪರಿಣಾಮ ಆರೋಪಿಯ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.