ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಡಿಸೆಂಬರ್.28ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕರ್ನಾಟಕದ ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತವರಣವಿದ್ದು, ಇಂದು ಹಾಗೂ ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚನೆ ನೀಡಲಾಗಿದೆ.
ಇನ್ನು ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ನಿರ್ಮಾಣವಾಗುತ್ತಿದ್ದು, ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ಕರ್ನಾಟಕದಲ್ಲೂ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಕೊಯ್ಲಿಗೆ ಬಂದಿರುವ ಅನೇಕ ಬೆಳೆಗಳು ಹಾಳಾಗುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರೈತರು ಭಾರೀ ಆತಂಕಕ್ಕೊಳಗಾಗಿದ್ದಾರೆ.