ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಸರ್ಕಾರ ರೈತರ ಪರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯ ರೈತ ನಿಯೋಗವೂ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಭೂಸ್ವಾಧೀನ ಕೈಬಿಡುವಂತೆ ಮನವಿ ಮಾಡಿದ್ದಾರೆ.
ಈ ಕುರಿತು ಇಂದು(ಡಿಸೆಂಬರ್.23) ರೈತರ ನಿಯೋಗ ಸಭೆಯಲ್ಲಿ ರೈತರ ಮನವಿಗೆ ಪ್ರತಿಕ್ರಿಯೆ ನೀಡಿ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಭೂಸ್ವಾಧೀನಕ್ಕೆ 430 ಎಕರೆ ಜಮೀನನ್ನು ಭೂಸ್ವಾಧೀನಪಡಿಸಿಕೊಳ್ಳುವಂತೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಆದರೆ ಅಂತಿಮ ಅಧಿಸೂಚನೆ ಹೊರಡಿಸಲಾಗಿರುವ ಜಮೀನನ್ನು ವಾಪಾಸ್ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಸರ್ಕಾರ ರೈತರ ಪರವಾಗಿದ್ದು ಈ ವಿಷಯದ ಕುರಿತು ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಈ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯವನ್ನು ಸಹ ಪಡೆದುಕೊಂಡು ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.