ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ ದೃಷ್ಟಿಯಿಂದ ೨೦೨೫-೨೬ನೇ ಸಾಲಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಕೆಳಕಂಡ ಯೋಜನೆಗಳನ್ನು ಘೋಷಿಸಿದ್ದಾರೆ.
- ರಾಜ್ಯದಲ್ಲಿ 50 ಹಾಸಿಗೆ ಸಾಮರ್ಥ್ಯದ 14 Critical Care Block ಗಳು ಹಾಗೂ ಬೆಂಗಳೂರು ನಗರದಲ್ಲಿ 100 ಹಾಸಿಗೆ ಸಾಮರ್ಥ್ಯದ ಒಂದು Critical Care Block ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ.
- ಅಥಣಿ, ಹುನಗುಂದ ಮತ್ತು ಮುಧೋಳದಲ್ಲಿ 50 ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ಸ್ಥಾಪನೆ ಮಾಡಲು ಅನುಮೋದನೆ ನೀಡಲಾಗಿದೆ.
- ಆಶಾಕಿರಣ ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದಡಿ 1.4 ಕೋಟಿ ಜನರಿಗೆ ಕಣ್ಣಿನ ತಪಾಸಣೆ; 3.3 ಲಕ್ಷ ಜನರಿಗೆ ಉಚಿತ ಕನ್ನಡಕ ವಿತರಣೆ ಮತ್ತು 93,800 ಜನರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗಿದೆ.
- ನರವೈಜ್ಞಾನಿಕ ಖಾಯಿಲೆಗಳಿಗೆ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದಡಿ (KaBHI) ನಿಮ್ಹಾನ್ಸ್ ಸಹಯೋಗದೊಂದಿಗೆ ಒಟ್ಟು 2.61 ಲಕ್ಷ ತಪಾಸಣೆ ಮಾಡಿ 32,630 ನರರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಈ ಯೋಜನೆಯನ್ನು ಈ ವರ್ಷ ಎಲ್ಲಾ ಹಂತದ ಆರೋಗ್ಯ ಕೇಂದ್ರಗಳಿಗೆ ವಿಸ್ತರಿಸಲು 20 ಕೋಟಿ ರೂ. ಒದಗಿಸಲಾಗಿದೆ. ಅಲ್ಲದೇ, ಮಾನಸಿಕ ಅಸ್ವಸ್ಥರ ಆರೈಕೆಗೆ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಸರ್ಕಾರೇತರ ಸಂಸ್ಥೆಗಳ ಸಹಯೋಗದೊಂದಿಗೆ ಆರೈಕೆ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
- 2025-26 ನೇ ಸಾಲಿನಲ್ಲಿ ಈ ಕೆಳಗಿನಂತೆ ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು:
i) ಬೆಂಗಳೂರು ಉತ್ತರ ತಾಲ್ಲೂಕಿನ ವ್ಯಾಪ್ತಿಯಲ್ಲಿ 200 ಹಾಸಿಗೆಯ ಅತ್ಯಾಧುನಿಕ ಮತ್ತು ಸುಸಜ್ಜಿತ ಆಸ್ಪತ್ರೆಯನ್ನು 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.
ii) ಹೊಸದಾಗಿ ಘೋಷಣೆಯಾಗಿರುವ ತಾಲ್ಲೂಕುಗಳಾದ ಹನೂರು, ಅಳ್ನಾವರ, ಅಣ್ಣಿಗೇರಿ, ಮಸ್ಕಿ, ಸಿರಿವಾರ, ಕಾಪು, ಬಬಲೇಶ್ವರ, ಕೊಲ್ಹಾರ, ಚೇಳೂರು, ತೇರದಾಳದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ
ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಿಸಲಾಗುವುದು. ಪೊನ್ನಂಪೇಟೆಯಲ್ಲಿ ಹೊಸದಾಗಿ ಸಮುದಾಯ ಆರೋಗ್ಯ ಕೇಂದ್ರವನ್ನು ಆರಂಭಿಸಲಾಗುವುದು.
iii) ಮಾಲೂರು, ಮಾಗಡಿ, ಕುಶಾಲನಗರ, ಕೊರಟಗೆರೆ, ಜಗಳೂರು, ಸವಣೂರು, ರಾಮದುರ್ಗ ಮತ್ತು ಸವದತ್ತಿ ತಾಲ್ಲೂಕು ಮಟ್ಟದ ಆಸ್ಪತ್ರೆಗಳನ್ನು ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗಳನ್ನು ಒಟ್ಟು 650 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಮಾಡಲಾಗುವುದು.
iv) ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು.
v) ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ 200 ಹಾಸಿಗೆ ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು.
vi) ಮೈಸೂರು ಜಿಲ್ಲೆಯ ತಗಡೂರು ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.
vii) ಹೆಚ್ಚಿನ ದುರಸ್ತಿ ಅಗತ್ಯವಿರುವ ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳನ್ನು 183 ಕೋಟಿ ರೂ. ವೆಚ್ಚದಲ್ಲಿ ಹಂತ ಹಂತವಾಗಿ ದುರಸ್ತಿಗೊಳಿಸಲಾಗುವುದು.





