ಕೊಪ್ಪಳ: ಬಿಜೆಪಿಯವರಂತೆ ಸುಳ್ಳು ಆಶ್ವಾಸನೆಗಳನ್ನು ನೀಡಿಲ್ಲ. ನಾವು ಹೇಳಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಮೂಲಕ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಕಪ್ಪು ಹಣ ತಂದು ದೇಶದ ಪ್ರತಿಯೊಬ್ಬರ ಖಾತೆಗೂ 15 ಲಕ್ಷ ಹಾಕುವುದಾಗಿ ಹೇಳಿ ಮೋಸ ಮಾಡಿದ್ದಾರೆ. ದೇಶದ ಯುವ ಜನತೆ ಉದ್ಯೋಗವಿಲ್ಲದೇ ಪರದಾಡುತ್ತಿದ್ದಾರೆ. ಈ ರೀತಿ ಸುಳ್ಳು ಆಶ್ವಾಸನೆಗಳನ್ನು ನೀಡಿ ಜನರನ್ನು ಮರಳು ಮಾಡುವುದರಲ್ಲಿ ಬಿಜೆಪಿಗರು ನಿಸ್ಸೀಮರು ಎಂದು ವಾಗ್ದಾಳಿ ನಡೆಸಿದರು.
ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಸಚಿವರು ದೆಹಲಿಯಲ್ಲಿ ಹೈಕಮಾಂಡ್ ಜೊತೆ ಚರ್ಚಿಸಿದ್ದಾರೆ. ಅಂತಿಮವಾಗಿ ಇದನ್ನೆಲ್ಲ ಕೇಂದ್ರದ ನಾಯಕರು ನೋಡಿಕೊಳ್ಳುತ್ತಾರೆ ಎಂದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಯಾರು ಮಾತನಾಡುವಂತಿಲ್ಲ. ಈ ವಿಷಯವಾಗಿ ಕೇಂದ್ರದ ನಾಯಕರು ನಮಗೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.





