ಮೈಸೂರು: ಚಾಮರಾಜನಗರ ಜಿಲ್ಲೆಯ ಹಾಡಿಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಯಾವುದೇ ಸಮಸ್ಯೆ ಉಂಟಾದರೂ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ ಬಗೆಹರಿಸುವುದಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿದ್ದಾರೆ.
ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್ ಪ್ರಧಾನ ಕಚೇರಿಯಲ್ಲಿ ನಡೆದ ಚಾಮರಾಜನಗರ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಹಾಡಿಗಳಿಗೆ ವಿದ್ಯುತ್ ಪೂರೈಸಲು ಅಗತ್ಯವಿರುವ ಕೆಲಸವನ್ನು ಅಧಿಕಾರಿಗಳು ಕೂಡಲೇ ಆರಂಭಿಸಬೇಕು. ಆನಂತರದಲ್ಲಿ ಯಾವುದೇ ಅಡೆತಡೆಗಳು ಅಥವಾ ಸಮಸ್ಯೆ ಉಂಟಾದಲ್ಲಿ ಖುದ್ದಾಗಿ ನಾನೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸರ್ಕಾರದ ಹಂತದಲ್ಲಿ ಮಾತುಕತೆ ನಡೆಸಿ ಅನುಮತಿ ಕೊಡಿಸುತ್ತೇನೆ ಎಂದು ಭರವಸೆ ನೀಡಿದರು.
ಇದಕ್ಕೂ ಮುನ್ನ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಮಾತನಾಡಿ, ಜಿಲ್ಲೆಯ ವ್ಯಾಪ್ತಿಯಲ್ಲಿರುವ 31 ಹಾಡಿಗಳಿಗೆ ವಿದ್ಯುತ್ ಪೂರೈಕೆ ಮಾಡುವ ನಿಟ್ಟಿನಲ್ಲಿ ಸೆಸ್ಕ್ ವತಿಯಿಂದ ಉತ್ತಮ ಸಹಕಾರ ಸಿಕ್ಕಿದೆ. 31 ಹಾಡಿಗಳ 2000 ಕುಟುಂಬಕ್ಕೆ ವಿದ್ಯುತ್ ಪೂರೈಸಲು ಯಾವುದೇ ಸರ್ಕಾರ 42 ಕೋಟಿ ರೂ.ಗಳನ್ನು ಖರ್ಚು ಮಾಡುವುದು ತೀರಾ ವಿರಳ. ಆದರೆ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಯಾವುದೇ ಆದಾಯದ ಬಗ್ಗೆ ಯಾವುದೇ ವಿಳಂಬ ಮಾಡದೆ, ಮೂಲಭೂತ ಹಕ್ಕು ಎಂದು ಪರಿಗಣಿಸಿ ವಿದ್ಯುತ್ ಪೂರೈಸಲು ಒಪ್ಪಿಗೆ ನೀಡಿದರು. ಆದರೆ, ಹಾಡಿಗಳಿಗೆ ವಿದ್ಯುತ್ ಪೂರೈಕೆ ಮಾಡಲು ಜಿಲ್ಲೆಯ ಹೆಚ್ಚಿನ ಭೂ ಪ್ರದೇಶ ಅರಣ್ಯ ಇಲಾಖೆಗೆ ಸೇರಿರುವುದು ದೊಡ್ಡ ಸವಾಲಾಗಿದೆ. ಅದನ್ನು ಸರಿಪಡಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದರು.
ಉಳಿದಂತೆ ಜಿಲ್ಲೆಯಲ್ಲಿ ಗೃಹಜ್ಯೋತಿ, ಗಂಗಾ ಕಲ್ಯಾಣ, ಕುಸುಮ್-ಬಿ, ಕುಸುಮ್-ಸಿ ಯೋಜನೆಗಳ ಅನುಷ್ಠಾನ ಸೇರಿದಂತೆ ಸೆಸ್ಕ್ ವತಿಯಿಂದ ಕೈಗೊಳ್ಳಲಾಗಿರುವ ಕಾರ್ಯಕ್ರಮಗಳು ಹಾಗೂ ಇತರೆ ಕೆಲಸಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಯಿತು.





