ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ಮಾರ್ಗದಲ್ಲಿ ವಾಹನ ಸವಾರರು ಕಿರಿಕಿರಿ ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ.
ಬೆಟ್ಟಕ್ಕೆ ತೆರಳುವ ಕೌದಳ್ಳಿ, ಮಧುವನಹಳ್ಳಿ ಮಾರ್ಗದ ಬಳಿ ರಸ್ತೆ ಕಿರಿದಾಗಿದ್ದು, ವಾಹನಗಳು ಮುಂದೆ ಸಾಗಲು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಿರಿದಾದ ರಸ್ತೆಯಿಂದ ಟ್ರಾಫಿಕ್ ಸಮಸ್ಯೆ ಉಂಟಾಗಲಿದ್ದು, ವಾಹನಗಳ ಮುಖಾಮುಖಿ ಸಂಚಾರಕ್ಕೆ ಭಾರೀ ಅಡ್ಡಿ ಉಂಟು ಮಾಡುತ್ತಿದೆ. ಪರಿಣಾಮ ಬೆಟ್ಟಕ್ಕೆ ತೆರಳುವ ಮಾರ್ಗದಲ್ಲಿ ವಾಹನ ಸವಾರರು ಹರ ಸಾಹಸ ಪಡುತ್ತಿದ್ದು, ಕಿರಿದಾದ ರಸ್ತೆಯಲ್ಲಿ ವಾಹನ ಚಲಾಯಿಸುವುದೇ ಸವಾಲಾಗಿದೆ.
ಈ ಹಿನ್ನೆಲೆಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಸ್ಥಳೀಯರು ಆಗ್ರಹಿಸಿದ್ದು, ಪ್ರತಿನಿತ್ಯ ಸಾವಿರಾರು ಮಂದಿ ಪ್ರಯಾಣಿಸುವ ಮಾರ್ಗದಲ್ಲಿ ಈ ಅವ್ಯವಸ್ಥೆ ತಲೆದೋರಿದೆ. ಪರಿಣಾಮ ಪ್ರಸಿದ್ಧ ಧಾರ್ಮಿಕ ಕ್ಷೇತ್ರಕ್ಕೆ ತೆರಳಲು ಸವಾರರು ಪರದಾಟ ನಡೆಸುವ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಆದಷ್ಟು ಬೇಗ ರಸ್ತೆಯನ್ನು ಸರಿಪಡಿಸಿ ಎಂದು ಸ್ಥಳೀಯರು ಹಾಗೂ ವಾಹನ ಸವಾರರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.





