ಮಂಜು ಕೋಟೆ
ಅಂಬೇಡ್ಕರ್ ಪ್ರತಿಮೆ ಅನಾವರಣ; ಅಂಬೇಡ್ಕರ್ ಜಯಂತಿಯಲ್ಲಿ ಭಾಗಿ; ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಎಚ್.ಡಿ.ಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಎಚ್.ಡಿ.ಕೋಟೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ ಹಾಗೂ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಹಾಗೂ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲು ಆಗಮಿಸುತ್ತಿದ್ದು, ಮುಖ್ಯಮಂತ್ರಿಗಳಾದ ನಂತರ ೪ನೇ ಬಾರಿ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ.
ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದ ಮುಂಭಾಗದಲ್ಲಿ ಸರ್ಕಾರದ ಅನುದಾನದಲ್ಲಿ ೫೦ ಲಕ್ಷ ರೂ. ವೆಚ್ಚದಲ್ಲಿ ಪಂಚಲೋಹದ ಅಂಬೇಡ್ಕರ್ ಪ್ರತಿಮೆಯನ್ನು ಅನಾವರಣ ಮಾಡಲಿದ್ದು, ೧.೭೫ ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆಯಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು -ಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಣೆ ಮಾಡಲಿದ್ದಾರೆ.
ಬೆಳಿಗ್ಗೆ ೧೧ಕ್ಕೆ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ವೆಂಕಟೇಶ್, ಸಂಸದರಾದ ಸುನಿಲ್ ಬೋಸ್, ಶಾಸಕರಾದ ಅನಿಲ್ ಚಿಕ್ಕಮಾದು, ಮುಂತಾದವರು ಭಾಗವಹಿಸುವರು.
ಈ ಬಾರಿ ಮುಖ್ಯಮಂತ್ರಿಯಾದ ನಂತರ ಸಿದ್ದರಾಮಯ್ಯ ಅವರು ಕೋಟೆ ತಾಲ್ಲೂಕಿಗೆ ಹೆಚ್ಚು ಬಾರಿ ಭೇಟಿ ನೀಡಿ, ಹೆಚ್ಚು ಅನುದಾನ ನೀಡಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಶಾಸಕ ಅನಿಲ್ ಚಿಕ್ಕಮಾದು ೧೫ ದಿನಗಳಿಂದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಲು ತಯಾರಿ ನಡೆಸಿದ್ದು, ಜಿಲ್ಲಾಮಟ್ಟದ ಅಧಿಕಾರಿಗಳಾದ ಲಕ್ಷ್ಮೀಕಾಂತ್ ರೆಡ್ಡಿ, ಎಸ್‌ಪಿ ವಿಷ್ಣುವರ್ಧನ್, ಡಿವೈಎಸ್‌ಪಿ ಗೋಪಾಲಕೃಷ್ಣ, ಕೋಟೆ ತಹಸಿಲ್ದಾರ್ ಶ್ರೀನಿವಾಸ್, ಸರಗೂರು ತಹಸಿಲ್ದಾರ್ ಮೋಹನಕುಮಾರಿ, ಇಒ ಧರಣೇಶ್, ಸರ್ಕಲ್ ಇನ್‌ಸ್ಪೆಕ್ಟರ್ ಗಂಗಾಧರ್, ಸಮಾಜ ಕಲ್ಯಾಣ ಅಧಿಕಾರಿ ರಾಮಸ್ವಾಮಿ, ನಿರ್ಮಿತಿ ಕೇಂದ್ರದ ಅಧಿಕಾರಿ ಸುಪ್ರೀತ್ ಗೌಡ, ಕಾರ್ಯಕರ್ತರು, ಮುಖಂಡರು, ಆದಿ ಕರ್ನಾಟಕ ಮಹಾಸಭಾದವರ ಜೊತೆ ಸಭೆ ನಡೆಸಿ ಸಕಲ ಸಿದ್ಧತೆಯನ್ನು ನಡೆಸಿದ್ದಾರೆ.
ಸುಮಾರು ೧೫,೦೦೦ ಜನರ ಸಮ್ಮುಖದಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಮಾಡಿ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು, ತತ್ವ, ಸಿದ್ಧಾಂತಗಳನ್ನು ಕ್ಷೇತ್ರದ ಜನತೆಗೆ ಗಣ್ಯರ ಮೂಲಕ ತಿಳಿಸಬೇಕೆಂಬ ಉದ್ದೇಶದಿಂದ ಶಾಸಕರು ಪ್ರತಿ ಗ್ರಾಮದಿಂದಲೂ ಹೆಚ್ಚು ಜನರನ್ನು ಕರೆತರುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ.
ಕಳೆದ ನವೆಂಬರ್‌ನಲ್ಲಿ ವಾಲ್ಮೀಕಿ ಜಯಂತಿಯನ್ನು ಮುಖ್ಯಮಂತ್ರಿ ಅವರಿಂದಲೇ ಉದ್ಘಾಟನೆ ಮಾಡಿಸಿದ್ದು, ಈಗ ಡಾ.ಅಂಬೇಡ್ಕರ್ ಜಯಂತಿಯನ್ನು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಸಲು ಶಾಸಕ ಅನಿಲ್ ಚಿಕ್ಕಮಾದು ಮುಂದಾಗಿದ್ದಾರೆ.
” ಮಹನೀಯರ ಜಯಂತಿ ಕಾರ್ಯಕ್ರಮಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇನ್ನಿತರ ಗಣ್ಯರ ಸಮ್ಮುಖದಲ್ಲಿ ನಮ್ಮ ಕ್ಷೇತ್ರದಲ್ಲಿ ಅರ್ಥಪೂರ್ಣವಾಗಿ ಅದ್ಧೂರಿಯಾಗಿ ನಡೆಯುತ್ತಿರುವುದು ತಾಲ್ಲೂಕಿನ ಸೌಭಾಗ್ಯವಾಗಿದೆ. ಇದರ ಜೊತೆಗೆ ಕ್ಷೇತ್ರದ ಅಭಿವೃದ್ಧಿಗೆ ಕೋಟ್ಯಂತರ ರೂ. ಅನುದಾನದ ಕಾಮಗಾರಿಗಳಿಗೂ ಚಾಲನೆ ದೊರಕಲಿದೆ. ಜೊತೆಗೆ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಗುವುದು. ಮುಖ್ಯಮಂತ್ರಿಗಳು ಅನೇಕ ಬಾರಿ ಎಚ್.ಡಿ.ಕೋಟೆಗೆ ಭೇಟಿ ನೀಡುತ್ತಿರುವುದು ಅಭಿವೃದ್ಧಿಗೆ ಪೂರಕವಾಗಿದೆ.”
-ಅನಿಲ್ ಚಿಕ್ಕಮಾದು, ಶಾಸಕರು





